ಕೊಪ್ಪಳ: ಬಿಸಿಲ ನಾಡು ಕೊಪ್ಪಳದಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಕಾವು ಹೆಚ್ಚಿದ್ದು, ಕಾಂಗ್ರೆಸ್ ಪಕ್ಷ ತನ್ನ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದೆ. ಆದರೆ, ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದು, ಗಂಗಾವತಿ ಕ್ಷೇತ್ರಕ್ಕೆ ಅಭ್ಯರ್ಥಿಯ ಹೆಸರು ಘೋಷಣೆ ಮಾಡದೆ ಇರೋದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಗಂಗಾವತಿ ಕ್ಷೇತ್ರಕ್ಕೆ ಯಾರು?: ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು ಐದು ವಿಧಾನಸಭಾ ಕ್ಷೇತ್ರಗಳಿದ್ದು, ಆ ಪೈಕಿ ನಾಲ್ಕು ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದೆ. ಜಿಲ್ಲೆಯ ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಕುಷ್ಟಗಿಯಲ್ಲಿ ಹಾಲಿ ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪುರ ಹಾಗೂ ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಶಿವರಾಜ ತಂಗಡಗಿ ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹೆಸರನ್ನು ಪಕ್ಷ ತನ್ನ ಮೊದಲ ಹಂತದ ಪಟ್ಟಿಯಲ್ಲಿ ಘೋಷಣೆ ಮಾಡಿದೆ. ಆದರೆ ಗಂಗಾವತಿ ಕ್ಷೇತ್ರಕ್ಕೆ ಹೆಸರು ಘೋಷಣೆ ಮಾಡದಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಹೈ ವೋಲ್ಟೇಜ್ ಕ್ಷೇತ್ರ ಗಂಗಾವತಿ:ಕೊಪ್ಪಳ ಜಿಲ್ಲೆಯಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರ ಈಗ ಹೈ ವೋಲ್ಟೇಜ್ ಕ್ಷೇತ್ರವಾಗಿದೆ. ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಗಂಗಾವತಿ ಕ್ಷೇತ್ರದಲ್ಲಿ ಕೆಆರ್‌ಪಿಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಣೆ ಮಾಡಿದ ಬಳಿಕ ಗಂಗಾವತಿ ವಿಧಾನಸಭಾ ಕ್ಷೇತ್ರ ಮತ್ತಷ್ಟು ಹೈ ವೋಲ್ಟೇಜ್ ಕ್ಷೇತ್ರವಾಗಿ ಬದಲಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಗಂಗಾವತಿ ಕ್ಷೇತ್ರವನ್ನು ಹಗುರವಾಗಿ ಪರಿಗಣಿಸಲಾಗದು. ಹಾಗಾಗಿ ಈ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲು ಬಹಳಷ್ಟು ಲೆಕ್ಕಾಚಾರ ನಡೆಸಿವೆ.