ಬೆಂಗಳೂರು:ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ನ ಎರಡನೇ ಪಟ್ಟಿ ಅಂತಿಮಗೊಳಿಸಲು ದೆಹಲಿಯಲ್ಲಿ ನಡೆದ ಸಭೆ ಅಪೂರ್ಣಗೊಂಡಿದೆ. ರಾಷ್ಟ್ರೀಯ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರು ಒಟ್ಟಾಗಿ ಚುನಾವಣಾ ಸಮಿತಿ ಸಭೆಯಲ್ಲಿ ಭಾಗಿಯಾಗಿದ್ದರು. ಎರಡನೇ ಪಟ್ಟಿಯಲ್ಲಿ ಬಾಕಿ ಉಳಿದಿರುವ 100 ಸ್ಥಾನಗಳನ್ನು ಅಂತಿಮಗೊಳಿಸಿ ಬಿಡುಗಡೆ ಮಾಡುವ ಬಗ್ಗೆ ಚರ್ಚೆ ನಡೆಸಿದ್ದಾರೆ.
45 ಸ್ಥಾನಗಳಿಗೆ ಅಭ್ಯರ್ಥಿಗಳು ಅಂತಿಮ:ದೆಹಲಿಯಲ್ಲಿ ನಡೆದ ಎಐಸಿಸಿ ಚುನಾವಣೆ ಸಮಿತಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತಿತರರು ಭಾಗವಹಿಸಿದ್ದರು. ಈ ಎಲ್ಲಾ ನಾಯಕರು ಒಟ್ಟಾಗಿ ಚರ್ಚಿಸಿ ನೂರು ಸ್ಥಾನಗಳ ಪೈಕಿ 45 ಸ್ಥಾನಗಳಿಗೆ ಒಬ್ಬ ಅಭ್ಯರ್ಥಿಯನ್ನು ಅಂತಿಮಗೊಳಿಸಿದ್ದು ಉಳಿದ 55 ಸ್ಥಾನಗಳಿಗೆ ಅಭ್ಯರ್ಥಿಯ ಹೆಸರನ್ನು ಅಂತಿಮ ಗೊಳಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಿದ್ದಾರೆ.
ದೆಹಲಿಯಲ್ಲಿ ಚುನಾವಣಾ ಸಮಿತಿ ಸಭೆ ನಡೆಯಿತು. ಸಾಕಷ್ಟು ಪ್ರಯತ್ನದ ಬಳಿಕವೂ 55 ಕ್ಷೇತ್ರಗಳಿಗೆ ಅಭ್ಯರ್ಥಿ ಅಂತಿಮಗೊಳಿಸುವಲ್ಲಿ ಎಐಸಿಸಿ ನಾಯಕರ ನೇತೃತ್ವದ ಸಮಿತಿ ಸಭೆ ವಿಫಲವಾಗಿದ್ದು, ಬುಧವಾರ ಮಧ್ಯಾಹ್ನ ಮತ್ತೆ ಸಭೆ ಸೇರಲು ತೀರ್ಮಾನಿಸಲಾಗಿದೆ. ಬುಧವಾರದಂದು ರಾಜ್ಯ ನಾಯಕನ ವಿಶ್ವಾಸಕ್ಕೆ ಪಡೆದು ರಾಷ್ಟ್ರೀಯ ನಾಯಕರು ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆ ಹೆಚ್ಚಿದೆ.
ಬುಧವಾರ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಬೇಕಿತ್ತು. ಕೋಲಾರದಲ್ಲಿ ಹಮ್ಮಿಕೊಂಡಿರುವ ಸತ್ಯಮೇವ ಜಯತೆ ಕಾರ್ಯಕ್ರಮದ ಮೂಲಕ ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ನಡೆಸುವ ಹೋರಾಟಕ್ಕೆ ಚಾಲನೆ ನೀಡಬೇಕಿತ್ತು. ಇದರ ಜೊತೆಗೆ ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಬೇಕಿತ್ತು. ಆದರೆ, ಅನಿವಾರ್ಯ ಕಾರಣಗಳಿಂದ ರಾಹುಲ್ ಭೇಟಿ 5ರ ಬದಲು 9ಕ್ಕೆ ಮುಂದೂಡಿಕೆ ಆಗಿದೆ. ಈ ಹಿನ್ನೆಲೆಯಲ್ಲಿ ಬುಧವಾರವೂ ಕಾಂಗ್ರೆಸ್ ರಾಜ್ಯ ನಾಯಕರು ದಿಲ್ಲಿಯಲ್ಲೇ ಬಿಡು ಬಿಟ್ಟಿದ್ದು, ಮಧ್ಯಾಹ್ನದ ನಂತರ ಸಭೆ ಸೇರಿ ಚರ್ಚಿಸಿ ಬಾಕಿ ಉಳಿದ ಸ್ಥಾನಗಳಿಗೆ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಪ್ರಯತ್ನ ನಡೆಸಲಿದ್ದಾರೆ.
ರಾಷ್ಟ್ರೀಯ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರು ಒಟ್ಟಾಗಿ ಚುನಾವಣಾ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದರು. 2ನೇ ಪಟ್ಟಿ ಬಿಡುಗಡೆಗೆ ಕ್ಷಣಗಣನೆ: ರಾಜ್ಯ ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಬಿಜೆಪಿ ಮೊದಲ ಹಾಗೂ ಜೆಡಿಎಸ್‌ನ ಎರಡನೇ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ನಡೆದಿದೆ. ಅದೇ ರೀತಿ ಕಾಂಗ್ರೆಸ್ ಸಹ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಎರಡನೇ ಪಟ್ಟಿಯ ಬಿಡುಗಡೆಗೆ ಕಸರತ್ತು ನಡೆಸಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಲು ಕಾಂಗ್ರೆಸ್ನಂತೆ ಜೆಡಿಎಸ್ ಸಹ ಸಾಕಷ್ಟು ಹೆಣಗಾಡುತ್ತಿದೆ. ಇನ್ನೊಂದೆಡೆ ಬಿಜೆಪಿ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವಲ್ಲೇ ಮೀನಮೇಷ ಎಣಿಸುತ್ತಿದೆ. ಇದೇ ತಿಂಗಳ 13ರಿಂದ ನಾಮಪತ್ರ ಸ್ವೀಕರಿಸುವ ಕಾರ್ಯ ಆರಂಭವಾಗಲಿದ್ದು ಅಷ್ಟರೊಳಗೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ರಾಷ್ಟ್ರೀಯ ಪಕ್ಷವಾಗಿರುವ ಕಾಂಗ್ರೆಸ್ ತನ್ನ ಎರಡನೇ ಪಟ್ಟಿಯನ್ನು ಅಂತಿಮಗೊಳಿಸುವ ಕಡೆಯ ಹಂತದ ಪ್ರಯತ್ನವನ್ನು ದೆಹಲಿಯಲ್ಲಿ ನಡೆಸಿದ್ದು, ಬುಧವಾರ ಬಹುತೇಕ ಒಮ್ಮತ ಮೂಡಿ ಪಟ್ಟಿ ಸಿದ್ಧವಾಗುವ ಸಾಧ್ಯತೆ ಇದೆ. ಇದೇ ತಿಂಗಳ ಹತ್ತರಂದು ಎರಡನೇ ಪಟ್ಟಿ ಬಿಡುಗಡೆ ಮಾಡುವ ಯತ್ನದಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ.
ಇದನ್ನೂ ಓದಿ:ಬೆಂಗಳೂರಿನ ಹಾಲಿ ಶಾಸಕರಿಗೆ ಟಿಕೆಟ್ ಪಕ್ಕಾ: ಇಲ್ಲಿದೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿ