ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ 100ಕ್ಕೂ ಹೆಚ್ಚು ಸ್ಥಾನಗಳಿಗೆ ಪಕ್ಷದಿಂದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಶೀಘ್ರವೇ ಮೊದಲ ಪಟ್ಟಿ ಹೊರಬೀಳಲಿದೆ. ಎಲ್ಲ ಹಾಲಿ ಶಾಸಕರು ಪುನರಾವರ್ತನೆಯಾಗುವುದಿಲ್ಲ, ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೆಲವು ಶಾಸಕರನ್ನು ಕೈಬಿಡಲಿದೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಇನ್ನು ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ಮುಂದುವರಿದಿದೆ. ಈ ನಡುವೆ ಮಾತನಾಡಿರುವ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್, ಈ ಚುನಾವಣೆಯಲ್ಲಿ ಪಕ್ಷ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಾವು ಒಬ್ಬರೇ ಏಕಾಂಗಿಯಾಗಿ ಚುನಾವಣೆ ಎದುರಿಸುತ್ತಿದ್ದೇವೆ. ನಾವು ಸ್ವತಂತ್ರವಾಗಿ ಹೋರಾಡುತ್ತಿದ್ದೇವೆ. ನಾವು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಾರ್ಚ್ 20 ರಂದು ಬೆಳಗಾವಿಗೆ ರಾಹುಲ್:ಇದೇ ಮಾರ್ಚ್ 20 ರಂದು ರಾಹುಲ್ ಗಾಂಧಿ ಬೆಳಗಾವಿಗೆ ಆಗಮಿಸಲಿದ್ದಾರೆ. 1924ರಲ್ಲಿ ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದರು. ಗಾಂಧೀಜಿ ಅವರು ನೇತೃತ್ವ ವಹಿಸಿದ ಮೊದಲ ಮತ್ತು ಕೊನೆಯ ಕಾಂಗ್ರೆಸ್ ಅಧಿವೇಶನ ಅದು. ಆ ಪುಣ್ಯ ಭೂಮಿ ಬೆಳಗಾವಿಗೆ ರಾಹುಲ್ ಗಾಂಧಿಯವರು ಮೊದಲ ಬಾರಿಗೆ ಬರುತ್ತಿದ್ದಾರೆ. ಅಷ್ಟೇ ಅಲ್ಲ ಭಾರತ್ ಜೋಡೋ ಯಾತ್ರೆ ಬಳಿಕ ಮೊದಲ ರಾಜಕೀಯ ಭಾಷಣದಲ್ಲಿ ಅವರು ಭಾಗವಹಿಸುತ್ತಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ದೆಹಲಿಯಲ್ಲಿ ಎಐಸಿಸಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿದೆ. ಅದರಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಪಾಲ್ಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ ಜಿ ಪರಮೇಶ್ವರ್ ಸೇರಿದಂತೆ ಹಲವು ರಾಜ್ಯ ನಾಯಕರು ಈ ಮಹತ್ವದ ಸಭೆಯಲ್ಲಿ ಭಾಗವಹಿಸಿದ್ದರು. ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ಈ ಸಭೆ ನಡೆದಿದ್ದು, ಇದರಲ್ಲಿ ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿ ಅತ್ಯುನ್ನತ ನಾಯಕರ ಸಮ್ಮುಖದಲ್ಲಿ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಬಗ್ಗೆ ಚರ್ಚಿಸಲಾಗುತ್ತಿದೆ.
ದೆಹಲಿಯಲ್ಲಿ ಖರ್ಗೆ ನೇತೃತ್ವದಲ್ಲಿ ನಡೆದ ಸಭೆ : ಈಗಾಗಲೇ 120 ಮಂದಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಿ ರಾಜ್ಯನಾಯಕರು ದಿಲ್ಲಿಗೆ ಕಳುಹಿಸಿಕೊಟ್ಟಿದ್ದರು. ಇವತ್ತು ಇಂದಿನ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಂತಿಮ ರೂಪ ನೀಡಿದ್ದು ನೂರಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತಿದೆ. ಈ ಮೊದಲಿನ ವರದಿಯಂತೆ ಇಂದು ರಾತ್ರಿಯೇ ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗುವ ಮಾಹಿತಿ ಇತ್ತು.
ಇನ್ನೊಂದೆಡೆ, ಎಐಸಿಸಿ ಕೇಂದ್ರ ಚುನಾವಣಾ ಸಮಿತಿ ಸಭೆಯ ಬಳಿಕ ರಾಜ್ಯ ಕಾಂಗ್ರೆಸ್ ನಾಯಕರ ಭೇಟಿಗೆ ಕಾಂಗ್ರೆಸ್ ಪಕ್ಷದ ನೇತಾರ ರಾಹುಲ್ ಗಾಂಧಿ ಕಾಲಾವಕಾಶ ನೀಡಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದ ವಿಧಾನಸಭೆ ಚುನಾವಣೆ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಚುನಾವಣೆ ಸಿದ್ಧತೆ ಹಾಗೂ ಬಿಜೆಪಿ- ಜೆಡಿಎಸ್ ಪಕ್ಷಗಳನ್ನು ಎದುರಿಸಲು ಕೈಗೊಂಡಿರುವ ಕ್ರಮ ಹಾಗೂ ಕಾರ್ಯತಂತ್ರದ ಕುರಿತು ರಾಜ್ಯ ಕಾಂಗ್ರೆಸ್ ನಾಯಕರ ಜತೆ ರಾಹುಲ್ ಗಾಂಧಿಗೆ ಸಮಾಲೋಚಿಸಲಿದ್ದಾರೆ.
ಇದನ್ನೂ ಓದಿ :ದಿಲ್ಲಿಯಲ್ಲಿ ನಾಳೆ ಎಐಸಿಸಿ ಕೇಂದ್ರ ಚುನಾವಣಾ ಸಮಿತಿ ಸಭೆ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ ?!