ಡೆಹ್ರಾಡೂನ್ (ಉತ್ತರಾಖಂಡ) :ಉತ್ತರಾಖಂಡದ ರೂರ್ಕಿಯ ಬೆಲ್ರಾ ಎಂಬ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದ ಘರ್ಷಣೆಯಲ್ಲಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿದೆ. ಇದೇ ಕೋಪದಲ್ಲಿ ಜನರು ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಇದರಿಂದ 12ಕ್ಕೂ ಅಧಿಕ ಪೊಲೀಸರು ಗಾಯಗೊಂಡಿದ್ದಾರೆ.
ರೂರ್ಕಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾದ ಕಾರಣ ಸಿಆರ್ಪಿಸಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಇಡೀ ಗ್ರಾಮದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಕೆಲವು ಕಿಡಿಗೇಡಿಗಳು ಪೊಲೀಸ್ ತಂಡಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, 12 ಕ್ಕೂ ಅಧಿಕ ಸಿಬ್ಬಂದಿ ಗಾಯಗೊಂಡಿದ್ದಾರೆ. ಅಲ್ಲದೇ, ಕೆಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಪೊಲೀಸರು ಬಲಪ್ರಯೋಗ ನಡೆಸಿ, ಗುಂಪನ್ನು ಚದುರಿಸಲು ಅಶ್ರುವಾಯು ಬಳಸಿದರು. ಈವರೆಗೆ ಸುಮಾರು 24ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.