ಲಖನೌ(ಉತ್ತರ ಪ್ರದೇಶ): ಆಕ್ಸಿಜನ್ ಭರ್ತಿ ಮಾಡ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿ ನಡೆದಿದ್ದು, ಉಳಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಕ್ಸಿಜನ್ ಸ್ಫೋಟ; ಇಬ್ಬರು ಸಾವು, ಆರು ಮಂದಿ ಸ್ಥಿತಿ ಗಂಭೀರ - ಆಕ್ಸಿಜನ್ ಸಿಲಿಂಡರ್ ಸ್ಫೋಟ
ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡಿರುವ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ನಗರದ ಚಿನ್ಹಾಟ್ ಪ್ರದೇಶದ ಆಮ್ಲಜನಕ ಸ್ಥಾವರದಲ್ಲಿ ಈ ದುರ್ಘಟನೆ ನಡೆದಿದೆ ಎಂದು ಸ್ಟೇಷನ್ ಹೌಸ್ ಅಧಿಕಾರಿ ಧನಂಜಯ್ ಪಾಂಡೆ ತಿಳಿಸಿದ್ದಾರೆ. ಸ್ಥಳದಲ್ಲೇ ಸಾವನ್ನಪ್ಪಿದವರ ಗುರುತು ಪತ್ತೆಯಾಗಿಲ್ಲ. ಗಾಯಗೊಂಡಿರುವ ಆರು ಮಂದಿಯನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಈಗಾಗಲೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದು, ಮೃತರ ಕುಟುಂಬಕ್ಕೆ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆಯಿಂದ 26 ಜನರು ಸಾವನ್ನಪ್ಪಿರುವ ಘಟನೆ ನಡೆದಿತ್ತು. ಇದಾದ ಬಳಿಕ ಕರ್ನಾಟಕದ ಚಾಮರಾಜನಗರದಲ್ಲಿ ಆಕ್ಸಿಜನ್ ಸಮಸ್ಯೆಯಿಂದ 24 ಜನರು ಸಾವನ್ನಪ್ಪಿದ್ದಾರೆಂಬ ಆರೋಪ ಕೇಳಿ ಬಂದಿತ್ತು.