ಭುವನೇಶ್ವರ (ಒಡಿಶಾ): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ಒಡಿಶಾ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ವರುಣ ತಂದಿಟ್ಟ ಅವಘಡದಿಂದಾಗಿ ಮೂವರು ಮೃತಪಟ್ಟಿದ್ದಾರೆ.
ಸೆಪ್ಟೆಂಬರ್ 18ರ ವರೆಗೆ ಮಳೆಯ ಆರ್ಭಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, 19.53 ಲಕ್ಷ ಜನರು ಸಂಕಷ್ಟಕ್ಕೀಡಾಗಿದ್ದಾರೆ.
ಇದನ್ನೂ ಓದಿ: ಧಾರಾಕಾರ ಮಳೆಗೆ ಗುಜರಾತ್ ತತ್ತರ: 1,400 ಜನರ ಸ್ಥಳಾಂತರ, 335 ಮಂದಿ ರಕ್ಷಣೆ
ನಿರಂತರ ಮಳೆಯಿಂದಾಗಿ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಐದು ಜಿಲ್ಲೆಗಳ ತಗ್ಗು ಪ್ರದೇಶಗಳಿಂದ 3,819 ಜನರನ್ನು ಸ್ಥಳಾಂತರಿಸಲಾಗಿದೆ. 9 ಜಿಲ್ಲೆಗಳಲ್ಲಿ 265 ಮನೆಗಳಿಗೆ ಹಾನಿಯಾಗಿದೆ. ಕೇಂದ್ರಪರ ಜಿಲ್ಲೆಯಲ್ಲಿ ಮನೆಯ ಗೋಡೆ ಕುಸಿದು ಬಿದ್ದು ಇಬ್ಬರು ಹಾಗೂ ಖೋರ್ಧಾ ಜಿಲ್ಲೆಯಲ್ಲಿ ಒಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.