ನವದೆಹಲಿ: ಕೋವಿಡ್ ಸಾಂಕ್ರಾಮಿಕದಿಂದ ಮೃತಪಟ್ಟವರ ಸಂಬಂಧಿಗಳಿಗೆ ಮರಣ ಪ್ರಮಾಣಪತ್ರ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.
ಮರಣ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಕ್ಲಿಷ್ಟಕರವಾಗಿದ್ದು, ಇವುಗಳನ್ನು ಸರಳಗೊಳಿಸಬೇಕೆಂದು ಜೂನ್ 30ರಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. ಈ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂದು ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಅನಿರುದ್ಧ ಬೋಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೆಪ್ಟೆಂಬರ್ 11ರಂದು ಮರಣ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರಣೆ ನೀಡಬೇಕು ಎಂದಿರುವ ಕೋರ್ಟ್, ನಾವು ಈಗಾಗಲೇ ಆದೇಶ ನೀಡಿದ್ದೇವೆ. ಈಗಾಗಲೇ ಸಮಯವನ್ನು ವಿಸ್ತರಿಸಿದ್ದೇವೆ. ನೀವು ಈ ಪ್ರಕ್ರಿಯೆಯನ್ನು ಸರಳಗೊಳಿಸುವ ಹೊತ್ತಿಗೆ ಮೂರನೇ ಕೋವಿಡ್ ಅಲೆಯೂ ಮುಗಿಯುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿತು.