ಸಹರಾನ್‌ಪುರ (ಯುಪಿ):ಉತ್ತರ ಪ್ರದೇಶದ ಸಹರಾನ್‌ಪುರದ ಡೆಹ್ರಾಡೂನ್ ಮತ್ತು ಅಂಬಾಲಾ ಹೆದ್ದಾರಿಯಲ್ಲಿ ಮಂಗಳವಾರ ಮಧ್ಯಾಹ್ನ ಕಾರೊಂದಕ್ಕೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಮಾಹಿತಿ ತಿಳಿದು ರಾಂಪುರ ಮಣಿಹರನ್ ಪ್ರದೇಶಕ್ಕೆ ಆಗಮಿಸಿದ ಪೊಲೀಸರು, ಗ್ಯಾಸ್ ಕಟರ್‌ನಿಂದ ಕಾರನ್ನು ಕಟ್ ಮಾಡಿ ಶವಗಳನ್ನು ಹೊರತೆಗೆದಿದ್ದಾರೆ.
ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ಜ್ವಾಲಾಪುರ ಪಟ್ಟಣದ ನಿವಾಸಿಗಳಾದ ಉಮೇಶ್ ಗೋಯಲ್ (70), ಸುನಿತಾ ಗೋಯಲ್ (65), ಅಮರೇಶ್ ಜಿಂದಾಲ್ (55) ಮತ್ತು 50 ವರ್ಷದ ಗೀತಾ ಜಿಂದಾಲ್ ಮೃತ ದುರ್ದೈವಿಗಳು. ಮೃತರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮೃತರು ನೋಯ್ಡಾದಿಂದ ಹರಿದ್ವಾರಕ್ಕೆ ಕಾರಿನಲ್ಲಿ ಹಿಂತಿರುಗುತ್ತಿದ್ದರು. ರಾಂಪುರ ಮಣಿಹರನ್ ಪ್ರದೇಶದ ಚಾಲೆಂಜ್ ಗೇಟ್ ಬಳಿ ಹಿಂದಿನಿಂದ ವೇಗವಾಗಿ ಬಂದ ಕಾರು, ತನ್ನ ಮುಂದೆ ಹೊರಟಿದ್ದ ಟ್ರಕ್ಗೆ ಗುದ್ದಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ.
ತಕ್ಷಣ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ತಿಳಿದ ಕೂಡಲೇ ರಾಂಪುರ ಮಣಿಹರನ್ ಠಾಣೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ವಾಹನದೊಂದಿಗೆ ಸ್ಥಳಕ್ಕೆ ಆಗಮಿಸಿ ಕಾರಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರು. ಆದರೆ, ಅಷ್ಟೊತ್ತಿಗಾಗಲೇ ಕಾರಿನಲ್ಲಿದ್ದವರೆಲ್ಲರೂ ಸುಟ್ಟು ಕರಕಲಾಗಿದ್ದರು. ಪೊಲೀಸರು ಮೃತದೇಹಗಳನ್ನು ಕಾರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮಾಹಿತಿ ತಿಳಿದ ಬಳಿಕ ಪೊಲೀಸ್ ವರಿಷ್ಠಾಧಿಕಾರಿ ಅಭಿಮನ್ಯು ಮಾಂಗ್ಲಿಕ್ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ವಿಧಿವಿಜ್ಞಾನ ತನಿಖಾ ತಂಡದ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.