ನವದೆಹಲಿ:2024ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಸುಮಾರು 50 ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಸಚಿವರು ಇಂದು ನವದೆಹಲಿಯಲ್ಲಿ ಪಕ್ಷದ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೆಂಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಇತರರು ಭಾಗವಹಿಸುವ ಸಾಧ್ಯತೆಯಿದೆ. ಕರ್ನಾಟಕ ಡಿಸಿಎಂ ಶಿವಕುಮಾರ್ ಅವರು ದೆಹಲಿಗೆ ಆಗಮಿಸಿದರು. ದೆಹಲಿ ತಲುಪಿದ ನಂತರ ಮಂಗಳವಾರ ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರನ್ನು ಭೇಟಿ ಮಾಡಿದ್ದು, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ದೆಹಲಿಗೆ ತೆರಳುವ ಮುನ್ನ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿರುವ ಶಿವಕುಮಾರ್, ರಾಜ್ಯದ ಸಮಸ್ಯೆಗಳು ಮತ್ತು ಯೋಜನೆಗಳ ಕುರಿತು ಚರ್ಚಿಸಲು ಕೇಂದ್ರದ ಕೆಲವು ಸಚಿವರನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ. ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಹೆಚ್ಚುತ್ತಿರುವ ಅಸಮಾಧಾನದ ನಡುವೆಯೇ ಪಕ್ಷದ ಉನ್ನತ ನಾಯಕರೊಂದಿಗಿನ ಈ ಸಭೆಯನ್ನು ಪ್ರಮುಖವಾಗಿ ಪರಿಗಣಿಸಲಾಗಿದೆ.
ಆಡಳಿತ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿರುವ ಹಿನ್ನೆಲೆ ಕಾಂಗ್ರೆಸ್ ವರಿಷ್ಠರೊಂದಿಗಿನ ಸಭೆ ಮಹತ್ವದ್ದಾಗಿದ್ದು, ಸುಮಾರು 30 ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳು ಮತ್ತು ಕಾರ್ಯ ಚಟುವಟಿಕೆಗಳನ್ನು ಅನುಷ್ಠಾನಗೊಳಿಸದಿರುವ ಬಗ್ಗೆ ಕೆಲವು ಮಂತ್ರಿಗಳು ಕಳವಳ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ ನಾಯಕತ್ವಕ್ಕೆ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ.
ಇಂದು ದೆಹಲಿಯಲ್ಲಿ ಮಹತ್ವದ ಸಭೆ : ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ‘ಬುಧವಾರ ದೆಹಲಿಯಲ್ಲಿ ಸಭೆ ಇದೆ. ಅಲ್ಲಿ ಕೆಲವು ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೇನೆ. ಪಕ್ಷದ ಕೆಲಸಗಳ ಜೊತೆಗೆ ಸರ್ಕಾರಿ ಕೆಲಸವೂ ಇದೆ. ಹಾಗಾಗಿ ದೆಹಲಿಗೆ ಹೋಗುತ್ತಿದ್ದೇನೆ. ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿಯಲ್ಲಿ ರಾಜ್ಯ ಸಚಿವರು, ಮುಖಂಡರ ಸಭೆ ನಡೆಸಲಾಗುತ್ತಿದೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ಹಿತದೃಷ್ಟಿಯಿಂದ ಏನು ಮಾಡಬೇಕು ಎಂಬುದನ್ನು ಚರ್ಚಿಸಿ ಕಾರ್ಯತಂತ್ರ ರೂಪಿಸಬೇಕಿದೆ ಎಂದರು.