ವಿಜಯವಾಡ (ಆಂಧ್ರಪ್ರದೇಶ): ಕೌಶಲ್ಯಾಭಿವೃದ್ಧಿ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಆರೋಪಿಯಾಗಿ ಆಂಧ್ರಪ್ರದೇಶ ಸಿಐಡಿ ಪೊಲೀಸರ ಬಂಧನದಲ್ಲಿರುವ ಮಾಜಿ ಸಿಎಂ, ತೆಲುಗು ದೇಶಂ ಪಕ್ಷದ (ಟಿಡಿಪಿ) ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರಿಗೆ ಎಸಿಬಿ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಅವರನ್ನು ರಾಜಮಂಡ್ರಿಯ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಗುವುದು ಎಂದು ವರದಿಯಾಗಿದೆ.
ಆಂಧ್ರಪ್ರದೇಶದ ಮಾಜಿ ಸಿಎಂ ಎನ್ ಚಂದ್ರಬಾಬು ನಾಯ್ಡು ಅವರನ್ನು ಆಂಧ್ರ ಪೊಲೀಸರು ಶನಿವಾರ ವಿಜಯವಾಡದ ಎಸಿಬಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೌಶಲ್ಯಾಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಯ್ದುರನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ಶನಿವಾರ ನಂದ್ಯಾಲದಲ್ಲಿ ಬಂಧಿಸಿತ್ತು. ಬಳಿಕ ಕುಂಚನಪಲ್ಲಿಯಲ್ಲಿರುವ ಸಿಐಡಿಯ ವಿಶೇಷ ತನಿಖಾ ತಂಡ (ಎಸ್‌ಐಟಿ) ಕಚೇರಿಯಲ್ಲಿ 10 ಗಂಟೆಗಳ ಸುದೀರ್ಘ ವಿಚಾರಣೆ ನಡೆಸಿತ್ತು.
ನಂತರ ವೈದ್ಯಕೀಯ ಪರೀಕ್ಷೆಗೆ ವಿಜಯವಾಡದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯಕೀಯ ಪರೀಕ್ಷೆಗಳ ನಂತರ ಭ್ರಷ್ಟಾಚಾರ ನಿಗ್ರಹ ದಳದ ನ್ಯಾಯಾಲಯಕ್ಕೆ ಬಿಗಿ ಭದ್ರತೆಯ ನಡುವೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಲು ಪೊಲೀಸರ ಮನವಿ ಮೇರೆಗೆ ಸೆಪ್ಟೆಂಬರ್ 22ರ ವರೆಗೆ ನಾಯ್ಡು ಅವರನ್ನು ಪೊಲೀಸರ ವಶಕ್ಕೆ ನೀಡಲಾಗಿದೆ.
ಆಂಧ್ರಪ್ರದೇಶದಲ್ಲಿ 144 ಸೆಕ್ಷನ್ ಜಾರಿ:ಕೌಶಲಾಭಿವೃದ್ಧಿ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕ ಕ್ರಮವಾಗಿ ಆಂಧ್ರಪ್ರದೇಶ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ.