ಚೆನ್ನೈ (ತಮಿಳುನಾಡು) :ತೀವ್ರ ಅನಾರೋಗ್ಯಕ್ಕೀಡಾಗಿದ್ದ ಹಿರಿಯ ನಟ ಮತ್ತು ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಸಂಸ್ಥಾಪಕ ನಾಯಕ ವಿಜಯಕಾಂತ್ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಹಲವು ದಿನಗಳಿಂದ ಉಸಿರಾಟದ ತೊಂದರೆ, ಜ್ವರ, ಕೆಮ್ಮಿನಿಂದ ಬಳಲುತ್ತಿದ್ದ ಅವರು ಇಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಕೊರೊನಾ ಸೋಂಕು ತಗುಲಿರುವ ವರದಿ ಬಂದಿದೆ.
ಆಸ್ಪತ್ರೆಯು ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ಕ್ಯಾಪ್ಟನ್ ವಿಜಯಕಾಂತ್ ಅವರು ನ್ಯುಮೋನಿಯಾದಿಂದ ಬಳಲುತ್ತಿದ್ದರು. ಇಲ್ಲಿ ದಾಖಲಾದ ಬಳಿಕ ವೆಂಟಿಲೇಟರಿ ಬೆಂಬಲದಲ್ಲಿದ್ದರು. ವೈದ್ಯಕೀಯ ಸಿಬ್ಬಂದಿಯ ಅತ್ಯುತ್ತಮ ಪ್ರಯತ್ನದ ಹೊರತಾಗಿಯೂ ಅವರು ಬೆಳಗ್ಗೆ ಅಸುನೀಗಿದರು ಎಂದು ತಿಳಿಸಿದೆ.
ತಮಿಳುನಾಡು ರಾಜಕೀಯ ಮತ್ತು ಸಿನಿಮಾ ಕ್ಷೇತ್ರದಲ್ಲಿ ಗುರುತಿಸಿಕೊಡಿದ್ದ ವಿಜಯಕಾಂತ್ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಅವರ ನಿಧನವು ಬೆಂಬಲಿಗರಿಗೆ ಮತ್ತು ತಮಿಳುನಾಡಿನ ಜನತೆಗೆ ಅತಿದೊಡ್ಡ ನಷ್ಟ ಎಂದು ಹೇಳಿದ್ದಾರೆ. ಅಚ್ಚುಮೆಚ್ಚಿನ ನಾಯಕನನ್ನು ಕಳೆದುಕೊಂಡ ರಾಜ್ಯ ದುಃಖದಲ್ಲಿರುವುದರಿಂದ ಅಂತ್ಯಕ್ರಿಯೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಕೊರೊನಾ ವರದಿ ಪಾಸಿಟಿವ್:ವಿಜಯಕಾಂತ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಪರೀಕ್ಷೆಯಲ್ಲಿ ಪತ್ತೆಯಾಗಿತ್ತು. ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಅವರಿಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಅಳವಡಿಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಅವರಿಗೆ ಸೋಂಕು ಇರುವುದು ಕಂಡುಬಂದಿದೆ.