ನವದೆಹಲಿ: ಕರ್ನಾಟಕದ ಬಳ್ಳಾರಿಯಲ್ಲಿ ಉಕ್ಕಿನ ಸ್ಥಾವರ ಸ್ಥಾಪಿಸಲು ಸ್ವಾಧೀನಪಡಿಸಿಕೊಂಡಿದ್ದ 2,643 ಎಕರೆ ಭೂಮಿಯನ್ನು ಹಿಂದಿರುಗಿಸಲು ನಿರ್ಧರಿಸಿರುವುದಾಗಿ ವಿಶ್ವದ ಅತಿದೊಡ್ಡ ಉಕ್ಕು ಉತ್ಪಾದಕ ಅರ್ಸೆಲರ್ ಮಿತ್ತಲ್ ಕಂಪನಿಯು ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಈಗಾಗಲೇ ಪಾವತಿಸಿರುವ 267 ಕೋಟಿ ರೂಪಾಯಿ ಮೊತ್ತವನ್ನೂ ಕೂಡ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಮುಟ್ಟುಗೋಲು ಹಾಕಿಕೊಳ್ಳಬಹುದು ಎಂದು ತಿಳಿಸಿದೆ.
ಈ ಪ್ರಕರಣವು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರ ಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತು. ಅರ್ಸೆಲರ್ ಮಿತ್ತಲ್ ಕಂಪನಿಯನ್ನು ಪ್ರತಿನಿಧಿಸಿದ ವಕೀಲರು, "ಬದಲಾದ ಸನ್ನಿವೇಶದಲ್ಲಿ ಅರ್ಜಿದಾರರು ಭೂಮಿಯನ್ನು ಇಟ್ಟುಕೊಳ್ಳಲು ಬಯಸುವುದಿಲ್ಲ ಮತ್ತು 2,643 ಎಕರೆಗಳ ಸಂಪೂರ್ಣ ಭೂಮಿಯನ್ನು ಹಿಂದಿರುಗಿಸುತ್ತಾರೆ. ಈಗಾಗಲೇ ಪಾವತಿಸಿರುವ 267 ಕೋಟಿ ರೂಪಾಯಿಗಳನ್ನು ಕೂಡ ಕೆಐಎಡಿಬಿ ಮುಟ್ಟುಗೋಲು ಹಾಕಿಕೊಳ್ಳಬಹುದು" ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಅರ್ಸೆಲರ್ ಮಿತ್ತಲ್ ಕಂಪನಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ಪೀಠ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿಗೆ ನೋಟಿಸ್ ಜಾರಿ ಮಾಡಿತು. ವಿಚಾರಣೆ ವೇಳೆ ನ್ಯಾಯಪೀಠ, ಪರಿಹಾರದ ಬಗ್ಗೆ ರೈತರನ್ನು ಪ್ರತಿನಿಧಿಸುವ ವಕೀಲರ ಕಾಳಜಿಯನ್ನು ಗಮನಿಸಿತು. "ಭೂಮಾಲೀಕರಿಗೆ ಪರಿಹಾರ ಪಾವತಿಸಿದ ನಂತರ ಅಥವಾ ಹಣವನ್ನು ಹಿಂದಿರುಗಿಸಿದ ಬಳಿಕ ಭೂಮಿಯನ್ನು ಉಳಿಸಿಕೊಳ್ಳುತ್ತದೆಯೇ?" ಎಂಬುದನ್ನು ಸ್ಪಷ್ಟಪಡಿಸುವಂತೆ ಮಂಡಳಿಗೆ ತಿಳಿಸಿತು.
ಇದನ್ನೂ ಓದಿ:ಕೇಂದ್ರ ಸರ್ಕಾರ, ಚುನಾವಣಾ ಆಯೋಗ, ಆರ್ಬಿಐಗೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್.. ಯಾಕೆ ಅಂತೀರಾ?