ನವದೆಹಲಿ:ಸಂಸತ್ತಿನ ಮಳೆಗಾಲದ ಅಧಿವೇಶನ ಪ್ರಾರಂಭವಾಗುವುದಕ್ಕೆ ಒಂದು ದಿನ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಪಕ್ಷ ಸಭೆ ನಡೆಸಿದರು. ಈ ಸಭೆಯಲ್ಲಿ 33 ಪಕ್ಷಗಳ 40ಕ್ಕೂ ಹೆಚ್ಚು ನಾಯಕರು ಭಾಗವಹಿಸಿದ್ದರು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಸರ್ವಪಕ್ಷ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಮಾನ್ಸೂನ್ ಅಧಿವೇಶನದಲ್ಲಿ ಪ್ರತಿಪಕ್ಷಗಳು ಸೇರಿದಂತೆ ಎಲ್ಲಾ ಸದಸ್ಯರು ನೀಡುವ ಸಲಹೆ ಮತ್ತು ಸೂಚನೆಗಳು ತುಂಬಾ ಮೌಲ್ಯಯುತವಾಗಿವೆ ಎಂದಿದ್ದಾರೆ ಎಂದು ಜೋಶಿ ಸ್ಪಷ್ಟನೆ ನೀಡಿದ್ದಾರೆ.
ಪ್ರಹ್ಲಾದ್ ಜೋಶಿ ಹೇಳುವಂತೆ, ಸಂಸತ್ತಿನಲ್ಲಿ ಆರೋಗ್ಯಕರ ಮತ್ತು ಫಲಪ್ರದ ಚರ್ಚೆಗಳು ನಡೆಯಬೇಕು. ಸಂಸತ್ತಿನ ನಿಯಮಗಳು ಮತ್ತು ಕಾರ್ಯವಿಧಾನಗಳಿಗೆ ಅನುಗುಣವಾಗಿದ್ದರೆ ಆಡಳಿತ ಪಕ್ಷ ಯಾವುದೇ ವಿಷಯದ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ, ಸಚಿವ ಪ್ರಹ್ಲಾದ್ ಜೋಷಿ ಮಾತ್ರವಲ್ಲದೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ ಭಾಗವಹಿಸಿದ್ದರು.