ಹೈದರಾಬಾದ್:ಸ್ವದೇಶಿ ನಿರ್ಮಿತ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿದ ಕೋವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರದ ತಜ್ಞರ ಸಮಿತಿ ಅನುಮತಿ ನೀಡಿದೆ.
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಸಹಯೋಗದಲ್ಲಿ ಭಾರತ್ ಬಯೋಟೆಕ್ ಕೋವ್ಯಾಕ್ಸಿನ್ ಲಸಿಕೆ ಅಭಿವೃದ್ಧಿಪಡಿಸಿದ್ದು, ಈಗಾಗಲೇ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ನಡೆಸುತ್ತಿದೆ. ದೇಶಾದ್ಯಂತ 13 ಸಾವಿರ ಸ್ವಯಂ ಸೇವಕರ ಮೇಲೆ ಇದರ ಪ್ರಯೋಗ ನಡೆಸಲಾಗುತ್ತಿದೆ.
ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸುತ್ತಿರುವ ಆಕ್ಸ್‌ಫರ್ಡ್ ಕೋವಿಡ್-19 ಲಸಿಕೆ ಕೋವಿಶೀಲ್ಡ್ ತುರ್ತು ಬಳಕೆಗೆ ತಜ್ಞರ ಸಮಿತಿ ನಿನ್ನೆಯಷ್ಟೇ ಅನುಮತಿ ನೀಡಿತ್ತು. ಇದರ ಬೆನ್ನಲ್ಲೇ ಕೋವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ ಮಾಡಲು ಅವಕಾಶ ನೀಡಲಾಗಿದೆ.
ಭಾರತ್ ಬಯೋಟೆಕ್-ಐಸಿಎಂಆರ್ ಜಂಟಿಯಾಗಿ ಸಿದ್ಧಪಡಿಸುತ್ತಿರುವ ಸ್ವದೇಶಿ ಕೊರೊನಾ ಲಸಿಕೆ ಕೋವಾಕ್ಸಿನ್ ತಯಾರಿಕೆಯಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಂಸ್ಥೆಯ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಸುಚಿತ್ರಾ ಎಲ್ಲ ನಿನ್ನೆ ತಿಳಿಸಿದ್ದರು.