ಲಖನೌ(ಉತ್ತರ ಪ್ರದೇಶ):ಪೌರತ್ವದ ಕಿಚ್ಚಿಗೆ ಉತ್ತರ ಪ್ರದೇಶದಲ್ಲಿ 10 ಜನ ಬಲಿಯಾಗಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶದ ಹಲವೆಡೆ ನಡೆಯುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದ್ದು, ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ 10 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಫಿರೋಜಾಬಾದ್, ಕಾನ್ಪುರ್, ಬಿಂಜೋರ್, ಸಂಭಾಲ್ ಹಾಗೂ ಮೀರತ್ನಲ್ಲಿ ತಲಾ ಇಬ್ಬರು ಸಾವನ್ನಪ್ಪಿದ್ದಾರೆ.
ಶಾಂತಿ ಕಾಪಾಡುವಂತೆ ಸಿಎಂ ಯೋಗಿ ಮನವಿ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಶಾಂತಿ ಕಾಪಾಡುವಂತೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಯಾವುದೇ ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ. ಅನಗತ್ಯವಾಗಿ ಸಿಎಎ ಬಗ್ಗೆ ತಪ್ಪು ಮಾಹಿತಿ ಹಬ್ಬುತ್ತಿರುವವರ ಬಗ್ಗೆ ಯಾರೂ ನಂಬಬೇಡಿ ಎಂದು ಮನವಿ ಮಾಡಿದ್ದಾರೆ. ಅಲ್ಲದೆ ಈ ಬಗ್ಗೆ ಪೊಲೀಸರಿಗೆ ನಿರ್ದೇಶನ ನೀಡಿರುವ ಸಿಎಂ, ಜನರನ್ನು ತಪ್ಪು ದಾರಿಗೆ ಎಳೆಯುತ್ತಿರುವವರ ಬಗ್ಗೆ ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ.
ಯಾವುದೇ ಸಂದರ್ಭದಲ್ಲೂ ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆಯಿದ್ದು, ಪೊಲೀಸರು ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ. ಲಖನೌ, ಕಾನ್ಪುರ, ವಾರಣಾಸಿ ಸೇರಿದಂತೆ ರಾಜ್ಯದ ಹಲವು ಕಡೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.