ಶ್ರೀನಗರ :ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ಪ್ರದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.
ಉತ್ತರ ಕಾಶ್ಮೀರದ ಸೊಪೋರ್ ಪ್ರದೇಶದ ಹರ್ಶಿವದಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಈ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಬಂದ ನಂತರ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಗ್ರರು ಗುಂಡು ಹಾರಿಸಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿಯೂ ಪ್ರತಿ ದಾಳಿ ನಡೆಸಿದ್ದು, ಶೋಧ ಕಾರ್ಯಚರಣೆ ಏನ್ಕೌಂಟರ್ ಆಗಿ ಮಾರ್ಪಟ್ಟಿದೆ. ಸದ್ಯ ಗುಂಡಿನ ಚಕಮಕಿ ಇನ್ನೂ ಮುಂದುವರೆದಿದೆ.
ಇದಕ್ಕೂ ಮುನ್ನ, ಜೂನ್ 23 ರಂದು ಪುಲ್ವಾಮಾದ ಬ್ಯಾಂಡ್ ಜೂ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ಮುಖಾಮುಖಿಯಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಎನ್ಕೌಂಟರ್ ಮಾಡಿತ್ತು. ಈ ವೇಳೆ ಗಾಯಗೊಂಡಿದ್ದ ಸಿಆರ್‌ಪಿಎಫ್ ಸಿಬ್ಬಂದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇನ್ನು ಜೂನ್ 20 ರಂದು ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಮುಖಾಮುಖಿಯಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.
ಕಳೆದ ಒಂದು ವಾರದಲ್ಲಿ ಪುಲ್ವಾಮಾ ಮತ್ತು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಗಳಲ್ಲಿ ನಡೆದ ಕಾರ್ಯಾಚರಣೆಗಳಲ್ಲಿ ಭದ್ರತಾ ಪಡೆಗಳು ಒಟ್ಟು ಎಂಟು ಭಯೋತ್ಪಾದಕರನ್ನು ಹೆಡೆ ಮುರಿಕಟ್ಟಿವೆ. ಪುಲ್ವಾಮಾದಲ್ಲಿ ಜೈಶ್-ಎ-ಮೊಹಮ್ಮದ್ (ಜೆಎಂ) ನ ಮೂವರು ಮತ್ತು ಶೋಪಿಯಾನ್ನಲ್ಲಿ ಜೆಎಂ ಮತ್ತು ಹಿಜ್ಬುಲ್ ಮುಜಾಹಿದ್ದೀನ್ (ಎಚ್‌ಎಂ)ನ ಐವರು ಭಯೋತ್ಪಾದಕನ್ನು ಭದ್ರತಾ ಸಿಬ್ಬಂದಿ ಎನ್ಕೌಂಟರ್ ಮಾಡಿದೆ.