ತಿರುವನಂತಪುರಂ: ಕೇರಳದಲ್ಲಿ ವರುಣನ ಆರ್ಭಟ ಜೋರಾಗಿದ್ದು ಕನಿಷ್ಠ 20 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ಭಾರಿ ಮಳೆಯ ಪರಿಣಾಮ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನೀರು ನುಗ್ಗಿದೆ. ಹೀಗಾಗಿ ಭಾನುವಾರದ ತನಕ ವಿಮಾನ ಹಾರಾಟವನ್ನು ನಿಲ್ಲಿಸಲಾಗಿದೆ.
ಕೇರಳದಲ್ಲಿ ಇಂದು ಭಾರಿ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ. ರಕ್ಷಣಾ ಕಾರ್ಯಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್ ಸೇನೆಯ ನೆರವು ಕೋರಿದ್ದಾರೆ.
ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನುಗ್ಗಿದ ನೀರು ಇಡುಕ್ಕಿ, ಮಲಪ್ಪುರಂ, ಕೋಯಿಕ್ಕೋಡ್ ಹಾಗೂ ವಯನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್( ಭಾರಿ ಮಳೆಯಾಗುವ ಹಿನ್ನೆಲೆ) ಘೋಷಣೆ ಮಾಡಲಾಗಿದೆ. ಕೇಂದ್ರದಿಂದ ಮತ್ತೆ 10 ಎನ್ಡಿಆರ್ಎಫ್ ತಂಡವನ್ನು ಕಳುಹಿಸುವಂತೆ ಕೇರಳ ಸರ್ಕಾರ ಮನವಿ ಮಾಡಿದೆ.
ಮುಂದಿನ ಎರಡು ದಿನಗಳ ಕಾಲ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ಈ ಹಿನ್ನೆಲೆಯಲ್ಲಿ 20 ಸಾವಿರಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.
ರಾಹುಲ್ ಗಾಂಧಿ ಪ್ರತಿನಿಧಿಸುತ್ತಿರುವ ವಯನಾಡು ಕ್ಷೇತ್ರದಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, ನೆರವಿಗಾಗಿ ಪ್ರಧಾನಿ ಮೋದಿಯನ್ನು ಸಂಪರ್ಕಿಸುವುದಾಗಿ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.