ಹಥ್ರಾಸ್( ಉತ್ತರ ಪ್ರದೇಶ): ಕಳೆದ ಕೆಲ ದಿನಗಳ ಹಿಂದೆ ಉತ್ತರ ಪ್ರದೇಶದ ಹಥ್ರಾಸ್ನಲ್ಲಿ ದಲಿತ ಯುವತಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ ನಡೆದಿದ್ದು, ಇದರ ಬೆನ್ನಲ್ಲೇ ಇದೀಗ ಮತ್ತೊಂದು ದುಷ್ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ.
ನಾಲ್ಕು ವರ್ಷದ ಬಾಲಕಿ ಮೇಲೆ ಆಕೆಯ ಸಂಬಂಧಿ ಅತ್ಯಾಚಾರ ಎಸಗಿರುವುದಾಗಿ ವರದಿಯಾಗಿದೆ. ಈಗಾಗಲೇ ಆರೋಪಿಯ ಬಂಧನ ಮಾಡಲಾಗಿದೆ ಎಂದು ತಿಳಿದು ಬಂದಿದ್ದು, ಪ್ರಕರಣ ದಾಖಲಾಗಿದೆ. ಹಥ್ರಾಸ್ನಲ್ಲಿ ಕಳೆದ ತಿಂಗಳ 19 ವರ್ಷದ ಯುವತಿ ಮೇಲೆ ಅತ್ಯಾಚಾರ ಪ್ರಕರಣ ನಡೆದಿತ್ತು. ಈ ಕೇಸ್ಗೆ ದೇಶಾದ್ಯಂತ ವ್ಯಾಪಕ ಪ್ರತಿಭಟನೆ ವ್ಯಕ್ತವಾಗಿತ್ತು.
ಘಟನೆಗೆ ಸಂಬಂಧಿಸಿದಂತೆ ಮಾತನಾಡಿರುವ ಸರ್ಕಲ್ ಇನ್ಸ್ಪೆಕ್ಟರ್ ರುಚಿ ಗುಪ್ತಾ, ಬಾಲಕಿಗೆ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಆರೋಪಿ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಮತ್ತೊಂದು ದುಷ್ಕೃತ್ಯ:ಉತ್ತರ ಪ್ರದೇಶದ ಪ್ರತಾಪ್ಘಡದಲ್ಲಿ ಅಪ್ರಾಪ್ತೆ ಮೇಲೆ ಇಂತಹ ಮತ್ತೊಂದು ದುಷ್ಕೃತ್ಯ ನಡೆದಿದ್ದು, ಅಪ್ರಾಪ್ತೆ ಮೇಲೆ ಪುವಾಸಿ ಗ್ರಾಮದ ಮೂವರು ಲೈಂಗಿಕ ಕಿರುಕುಳವೆಸಗಿದ್ದಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಗ್ರಾಮದಲ್ಲಿರುವ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾಗಿ ತಿಳಿದು ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.