ಮಾಲ್ಡಾ(ಪಶ್ಚಿಮ ಬಂಗಾಳ):ಶಿವರಾತ್ರಿ ಹಬ್ಬದ ಪ್ರಯುಕ್ತ ತಯಾರಿಸಲಾಗಿದ್ದ ಆಹಾರವನ್ನು ಸೇವಿಸಿ 500ಕ್ಕೂ ಹೆಚ್ಚು ಜನರು ಜ್ವರದಿಂದ ಬಳಲಿರುವ ಘಟನೆ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಹಮೀದ್ಪುರ್ ಪ್ರದೇಶದಲ್ಲಿ ನಡೆದಿದೆ.
ಆಹಾರ ಸೇವಿಸಿದ ಕೆಲವೇ ಗಂಟೆಗಳಲ್ಲಿ ಹೊಟ್ಟೆ ನೋವು ಹಾಗೂ ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದರ ಬೆನ್ನಲ್ಲೇ ಅವರಿಗೆ ಜ್ವರ ಸಹ ಕಾಣಿಸಿಕೊಂಡಿದೆ ಎಂದು ವೈದ್ಯಾಧಿಕಾರಿ ಕೌಶಿಕ್ ಮಿಸ್ತ್ರಿ ತಿಳಿಸಿದ್ದಾರೆ. ಜಿಲ್ಲೆಯ ಶ್ರೀಪುರ್, ಸಿಬುಟೋಲಾ, ಟಿಂಗ್ಹೋರಿಯಾ ಮತ್ತು ಜೊಗೋಲ್ಟೋಲಾ ಗ್ರಾಮದ ಜನರು ಈ ಆಹಾರ ಸೇವಿಸಿದ್ದರು.
ಕೆಲವರಿಗೆ ಈಗಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿರುವ ಕಾರಣ ಮಾಲ್ಡಾ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ, ಊಟ ಮಾಡಿರುವ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದ್ದು, ಮನೆ ಮನೆಗೆ ತೆರಳಿ ಅವರ ಆರೋಗ್ಯದ ಮಾಹಿತಿ ಕಲೆ ಹಾಕಲಾಗುತ್ತಿದೆ.
ಇನ್ನು, ಸೇವಿಸಿದ ಆಹಾರ ಮತ್ತು ನೀರನ್ನು ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದ್ದು, ಯಾವ ಕಾರಣಕ್ಕಾಗಿ ಈ ಘಟನೆ ನಡೆದಿದೆ ಎಂಬುದರ ಕುರಿತು ನಿಖರ ಮಾಹಿತಿ ಲಭ್ಯವಾಗಬೇಕಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಶಾಸಕ ಸಬೀನಾ ಯಾಸ್ಮಿನ್, ಬ್ಲಾಕ್ ಅಭಿವೃದ್ಧಿ ಅಧಿಕಾರಿ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.