ನವದೆಹಲಿ:ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣದ ಬಗ್ಗೆ ಚರ್ಚಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್, ಸಿಎಂ ಅರವಿಂದ್ ಕೇಜ್ರಿವಾಲ್ ಜೊತೆ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಹಾಗು ಕೇಂದ್ರ ಆರೋಗ್ಯ ಮಂತ್ರಿ ಹರ್ಷವರ್ಧನ್ ಮಹತ್ವದ ಸಭೆ ನಡೆಸಲಿದ್ದಾರೆ.
ಈ ಸಭೆ 11 ಗಂಟೆಗೆ ನಡೆಯಲಿದ್ದು, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್, ರಾಜ್ಯ ವಿಕೋಪ ನಿರ್ವಹಣಾ ಪ್ರಾಧಿಕಾರದ ಸದಸ್ಯರು, ಇದರ ಜೊತೆಗೆ ಏಮ್ಸ್ನ ನಿರ್ದೇಶಕರು ಹಾಗೂ ಹಿರಿಯ ಅಧಿಕಾರಿಗಳು ಕೂಡಾ ಭಾಗವಹಿಸಲಿದ್ದಾರೆ ಎಂದು ನಿನ್ನೆ ಗೃಹಮಂತ್ರಿಗಳ ಕಚೇರಿ ಟ್ವೀಟ್ ಮಾಡಿದೆ.
ಇದರ ಜೊತೆಗೆ ಇನ್ನೂ ಎರಡು ಟ್ವೀಟ್ಗಳನ್ನು ಗೃಹ ಕಚೇರಿ ಮಾಡಿದ್ದು, ಕೇಂದ್ರ ಸಚಿವರಾದ ಅಮಿತ್ ಶಾ ಹಾಗೂ ಹರ್ಷವರ್ಧನ್ ಸಂಜೆ 5 ಗಂಟೆಗೆ ದೆಹಲಿ ಮುನಿಸಿಪಲ್ ಕಾರ್ಪೊರೇಷನ್ನ ಮೇಯರ್ ಜೊತೆ ಸಭೆ ನಡೆಸಲಿದೆ ಎಂಬುದನ್ನು ಸ್ಪಷ್ಟಪಡಿಸಿದೆ. 11 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಮೂರು ಮುನಿಸಿಪಲ್ ಕಾರ್ಪೊರೇಷನ್ನ ಕಮೀಷನರ್ಗಳು ಭಾಗವಹಿಸುತ್ತಾರೆ ಎಂದು ಮೂರನೇ ಟ್ವೀಟ್ ಉಲ್ಲೇಖಿಸಿದೆ.
ಬುಧವಾರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅಮಿತ್ ಶಾ ಅವರನ್ನು ಭೇಟಿ ಮಾಡಿ ಕೊರೊನಾ ನಿಯಂತ್ರಣದ ಬಗ್ಗೆ ಚರ್ಚೆ ನಡೆಸಿದ್ದರು. ಈ ವೇಳೆ ಕೇಂದ್ರ ಗೃಹ ಸಚಿವರು ಕೊರೊನಾ ನಿಯಂತ್ರಣಕ್ಕೆ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆಂದು ಕೇಜ್ರಿವಾಲ್ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ದೆಹಲಿ ಸಿಎಂ, ಲೆಫ್ಟಿನೆಂಟ್ ಗವರ್ನರ್ ಹಾಗು ಇತರ ಹಿರಿಯ ಅಧಿಕಾರಿಗಳೊಂದಿಗೆ ಕೇಂದ್ರ ಸಚಿವರು ಸಭೆ ನಡೆಸುತ್ತಿದ್ದಾರೆ.
ಸದ್ಯಕ್ಕೆ ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿಯಂತೆ ದೆಹಲಿಯಲ್ಲಿ 36,824 ಕೊರೊನಾ ಸೋಂಕಿತರಿದ್ದು, 13,398 ಮಂದಿ ಗುಣಮುಖರಾಗಿದ್ದಾರೆ. 22,212 ಮಂದಿ ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೆ 1,214 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.