ನವದೆಹಲಿ:ಉಪಚುನಾವಣೆಗೆ ಅನರ್ಹ ಶಾಸಕರು ಸ್ಪರ್ಧಿಸಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವ ಕಾರಣ, ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಖಾಡಕ್ಕಿಳಿದಿದ್ದಾರೆ. ಈಗಾಗಲೇ ಉಪಸಮರವನ್ನು ಗೆಲ್ಲುವ ನಿಟ್ಟಿನಲ್ಲಿ ಅವರು ಪಕ್ಷದ ರಾಜ್ಯದ ಹಿರಿಯ ಪದಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು ಇದೀಗ ಸಿಎಂ ಯಡಿಯೂರಪ್ಪನವರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಅನರ್ಹ ಶಾಸಕರಿಗೆ ಬಿಜೆಪಿ ಟಿಕೆಟ್ ವಿಚಾರ: ಬಿಎಸ್ವೈ ಜತೆ ಅಮಿತ್ ಶಾ ಮಹತ್ವದ ಚರ್ಚೆ! - ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಅನರ್ಹ ಶಾಸಕರು ರಾಜ್ಯದಲ್ಲಿ ನಡೆಯುವ ಉಪಚುನಾವಣೆಗೆ ಸ್ಪರ್ಧಿಸಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡುತ್ತಿದ್ದಂತೆ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ.
ಇನ್ನು ತೀರ್ಪು ಹೊರಬೀಳುತ್ತಿದ್ದಂತೆ ಕರ್ನಾಟಕದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಅಮಿತ್ ಶಾ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರಕ್ಕೆ ಅಳಿವು ಉಳಿವಿನ ಪ್ರಶ್ನೆಯಾಗಿರುವ 15 ವಿಧಾನಸಭೆ ಕ್ಷೇತ್ರಗಳನ್ನು ಗೆಲ್ಲಲು ಅನುಸರಿಸಬೇಕಿರುವ ಕಾರ್ಯತಂತ್ರಗಳ ಬಗ್ಗೆ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರ ಜೊತೆ 2ನೇ ಸುತ್ತಿನ ಸಭೆ ನಡೆಸುವ ಸಾಧ್ಯತೆ ಇದೆ.
ಇದೇ ವೇಳೆ ಅನರ್ಹ ಶಾಸಕರಿಗೆ ಸದ್ಯದ ಸ್ಥಿತಿಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡಬಹುದು ಅಥವಾ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಅವರು ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.