ನವದೆಹಲಿ:ಕೊರೊನಾ ಪ್ರಕರಣಗಳ ಏರುವಿಕೆಯ ಆಘಾತದ ನಡುವೆ ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮ ಪೂರ್ವ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಅಂಫಾನ್(Amphan) ಹೆಸರಿನ ಚಂಡಮಾರುತ ಇಂದು ಸಂಜೆ ಬಂಗಾಳ ಕೊಲ್ಲಿಯ ವಾಯುವ್ಯ ಭಾಗಕ್ಕೆ ಅಪ್ಪಳಿಸಲಿದ್ದು, ಇನ್ನೆರಡು ದಿನಗಳಲ್ಲಿ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಿದೆ. ಮುಂದಿನ ಐದು-ಆರು ದಿನಗಳವರೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಒಡಿಶಾ ಮತ್ತು ಪಶ್ಚಿಮ ಬಂಗಾಳ ಆಂಧ್ರ ಪ್ರದೇಶದ ಕರಾವಳಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಹರಿಯಾಣ ಮತ್ತು ದೆಹಲಿಯ ಕೆಲವು ಭಾಗಗಳಲ್ಲಿ ಮೇ 17 ರಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿಯ ವಾಯುವ್ಯ ಹವಾಮಾನ ಕೇಂದ್ರದ ಮುಖ್ಯಸ್ಥ ಕುಲದೀಪ್ ಶ್ರೀವಾಸ್ತವ್ ತಿಳಿಸಿದ್ದಾರೆ.