ಅಯೋಧ್ಯೆ: ಟ್ರಕ್ ಹಾಗೂ ಟೆಂಪೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಇಲ್ಲಿನ ಸೋಹವಾಲ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 28ರಲ್ಲಿ ನಡೆದಿದೆ. ಅಪಘಾತದಲ್ಲಿ 9 ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಅಯೋಧ್ಯೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಅಯೋಧ್ಯೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಸಾವು, 9 ಮಂದಿ ಸ್ಥಿತಿ ಗಂಭೀರ
ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ, ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಲಕ್ನೋ, ಅಯೋಧ್ಯೆ ಮತ್ತು ಗೋರಖ್‌ಪುರವನ್ನು ಸಂಪರ್ಕಿಸುವ ಹೆದ್ದಾರಿಯಲ್ಲಿ ಟೆಂಪೋ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿದ್ದು, ಈ ಕಾರಣದಿಂದ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಯಲ್ಲಿ ಮೃತಪಟ್ಟವರ ಕುರಿತು ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವಂತೆ ಅಯೋಧ್ಯೆ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಬೆಳಗ್ಗೆ 5ರ ಸುಮಾರಿಗೆ ಮೀನುಗಾರಿಕೆಗಾಗಿ ತೆರಳಿದ್ದ ಜನರ ಗುಂಪು ಭದ್ರಾಷಾದಿಂದ ಸರಯುನ ದೆಮ್ವಾ ಘಾಟ್‌ಗೆ ಹೋಗುತ್ತಿತ್ತು. ಈ ವೇಳೆ ರೌನಾಹಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಸೋಹವಾಲ್ ಕ್ರಾಸಿಂಗ್ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ಮತ್ತು ಗಾಯಗೊಂಡವರೆಲ್ಲರೂ ಭದ್ರಾಷಾ ಪ್ರದೇಶದ ಪೂರಕಲಂದರ್ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.