ಪಾಟ್ನಾ : ಬಿಹಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಕಟಿಹಾರ್ ಶಾಸಕ ತಾರ್ಕಿಶೋರ್ ಪ್ರಸಾದ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಮುಖಂಡ ಸುಶೀಲ್ ಕುಮಾರ್ ಮೋದಿ ಮಾಹಿತಿ ನೀಡಿದ್ದಾರೆ. ತಾರ್ಕಿಶೋರ್ ಪ್ರಸಾದ್ ಅವರೇ ಉಪಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ.
ಚುನಾವಣೆಗೂ ಮುನ್ನ ನಿತೀಶ್ ಕುಮಾರ್ ಅವರ ಸಂಪುಟದಲ್ಲಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸುಶೀಲ್ ಕುಮಾರ್ ಮೋದಿ ಕಾರ್ಯನಿರ್ವಹಿಸಿದ್ದರು. ಹೊಸ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯ ಬಗ್ಗೆ ಪ್ರತಿಕ್ರಿಯಿಸಿರುವ ಮೋದಿ, ಪಕ್ಷದ ಕಾರ್ಯಕರ್ತ ಹುದ್ದೆಯನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ನನಗೆ ನೀಡಲಾಗುವ ಜವಾಬ್ದಾರಿಯನ್ನು ನಿರ್ವಹಿಸುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆಯಾದ ತಾರ್ಕಿಶೋರ್ಗೆ ಟ್ವೀಟ್ ಮೂಲಕ ಅಭಿನಂದನೆ ಹೇಳಿದ್ದಾರೆ.
ಬಿಜೆಪಿ ಮತ್ತು ಸಂಘ ಪರಿವಾರ ಕಳೆದ 40 ವರ್ಷದ ರಾಜಕೀಯ ಜೀವನದಲ್ಲಿ ನನಗೆ ಬಹಳಷ್ಟು ಅವಕಾಶಗಳನ್ನು ಕೊಟ್ಟಿದೆ. ಕೆಲವರಿಗೆ ಅದು ದೊರೆತಿರಲು ಸಾಧ್ಯವಿಲ್ಲ. ನನಗೆ ಪಕ್ಷದಲ್ಲಿ ನೀಡಲಾಗುವ ಜವಾಬ್ದಾರಿಗಳನ್ನು ನಿರ್ವಹಿಸುತ್ತೇನೆ. ಪಕ್ಷದ ಕಾರ್ಯಕರ್ತನ ಹುದ್ದೆಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.