ನವದೆಹಲಿ:ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಅನೇಕ ಅಮಾಯಕರು ತಮ್ಮ ಪ್ರಾಣ ಕಳೆದುಕೊಂಡಿದ್ದು, ಹಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ವಾರಗಳ ಕಾಲ ನಡೆದ ಹಿಂಸಾಚಾರದಲ್ಲಿ ಶಾಲೆ, ಮನೆ, ವಾಹನ ಸೇರಿದಂತೆ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ಹಾಳಾಗಿದ್ದು, ಓರ್ವ ಪೊಲೀಸ್ ಹೆಡ್ಕಾನ್ಸ್ಟೇಬಲ್ ಹಾಗೂ ಗುಪ್ತಚರ ಇಲಾಖೆ ಅಧಿಕಾರಿ ಸಹ ತಮ್ಮ ಪ್ರಾಣವನ್ನ ಕಳೆದುಕೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಆಘಾತ ವ್ಯಕ್ತಪಡಿಸಿರುವ ಬಿಜೆಪಿ ಸಂಸದ ಪರ್ವೇಶ್ ವರ್ಮಾ, ತನ್ನ ಎರಡು ತಿಂಗಳ ಸಂಬಳವನ್ನ ಘಟನೆಯಲ್ಲಿ ಸಾವನ್ನಪ್ಪಿರುವ ಹೆಡ್ ಕಾನ್ಸ್ಟೇಬರ್ ರತನ್ ಲಾಲ್ ಹಾಗೂ ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಕುಟುಂಬಕ್ಕೆ ನೀಡಲು ಮುಂದಾಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಈಗಾಗಲೇ ದೆಹಲಿ ಸರ್ಕಾರ ರತನ್ಲಾಲ್ ಕುಟುಂಬಕ್ಕೆ 1 ಕೋಟಿ ರೂ ಪರಿಹಾರ ನೀಡಿದ್ದು, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಕೂಡ 1 ಕೋಟಿ ರೂ ಪರಿಹಾರ ಘೋಷಣೆ ಮಾಡಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವವರಗೆ 20 ಲಕ್ಷ ರೂ, ಮನೆ ಕಟ್ಟಿಕೊಳ್ಳಲು ಅರವಿಂದ್ ಕೇಜ್ರಿವಾಲ್ ಸರ್ಕಾರ 5 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ದೆಹಲಿ ಹಿಂಸಾಚಾರದಲ್ಲಿ ಇಲ್ಲಿಯವರೆಗೆ 42 ಜನರು ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಜನರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.