ನವದೆಹಲಿ:ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ಉನ್ನಾವೊ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿಯಾದ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.
ಉತ್ತರಪ್ರದೇಶದ ಬಿಜೆಪಿ ಅಧ್ಯಕ್ಷ ಸ್ವಂತಂತ್ರ ದೇವ್ ಸಿಂಗ್ ಮಾತನಾಡಿ, ಸೆಂಗರ್ ವಿರುದ್ಧ ಪಕ್ಷ ಕಠಿಣ ನಿಲುವು ತೆಗೆದುಕೊಂಡಿದೆ. ಪ್ರಕರಣದ ಕುರಿತು ಸಿಬಿಐ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಹೇಳಿದ್ದಾರೆ.
ಇದೊಂದು ಸೂಕ್ಷ್ಮ ಪ್ರಕರಣವಾಗಿದ್ದು, ಕಾಂಗ್ರೆಸ್, ಬಹುಜನ ಸಮಾಜವಾದಿ ಪಕ್ಷ ಹಾಗೂ ಸಮಾಜವಾದಿ ಪಕ್ಷಗಳು ರಾಜಕೀಯಗೊಳಿಸಲು ಯತ್ನಿಸುತ್ತಿವೆ ಎಂದು ಆರೋಪಿಸಿದ್ದಾರೆ.
ಅತ್ಯಾಚಾರ ಸಂತ್ರಸ್ಥೆ ಕಳೆದ ಭಾನುವಾರ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ. ಆಕೆ ಹಾಗೂ ವಕೀಲ ಮಹೇಂದ್ರ ಸಿಂಗ್ ಅವರು ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದಾರೆ. ಭೀಕರ ಅಪಘಾತದಲ್ಲಿ ಸಂತ್ರಸ್ತೆಯ ತಾಯಿ ಹಾಗೂ ಸಂಬಂಧಿ ಮೃತಪಟ್ಟಿದ್ದರು. ಈ ಘಟನೆಯಲ್ಲಿ ಪಿತೂರಿ ಅಡಗಿದ್ದು, ಸೂಕ್ತ ತನಿಖೆಯಾಗಬೇಕೆಂದು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಒತ್ತಾಯಿಸಿದ್ದವು. ಇದೀಗ ಬಿಜೆಪಿ, ಸೆಂಗರ್ ಅವರನ್ನು ಅಮಾನತು ಮಾಡಿದೆ.