ಭೋಪಾಲ್:ಮುಖ್ಯಮಂತ್ರಿ ಸ್ಥಾನಕ್ಕೆ ಕಮಲ್ನಾಥ್ ರಾಜೀನಾಮೆ ನೀಡಿದ್ದರಿಂದ ಇದೀಗ ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಕನ್ಫರ್ಮ್ ಆಗಿದೆ. ಕೆಲವೇ ಕ್ಷಣಗಳಲ್ಲಿ ನಾಲ್ಕನೇ ಬಾರಿಗೆ ರಾಜ್ಯದ ಸಿಎಂ ಆಗಿ ಚೌಹಾಣ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಇದರ ಬೆನ್ನಲ್ಲೇ ಮಾತನಾಡಿರುವ ಅವರು, ಮಧ್ಯಪ್ರದೇಶದ ಅಭಿವೃದ್ಧಿಗಾಗಿ ಶ್ರಮಿಸಲಿದ್ದು, ರಾಜ್ಯದಲ್ಲಿ ಉಲ್ಬಣಗೊಂಡಿರುವ ಕೊರೊನಾ ವಿರುದ್ಧ ಹೋರಾಡುವುದೇ ನನ್ನ ಮೊದಲ ಆದ್ಯತೆ ಎಂದಿದ್ದಾರೆ. ಇದೇ ವೇಳೆ ಯಾವುದೇ ಕಾರಣಕ್ಕೂ ಸಂಭ್ರಮಾಚರಣೆ ಮಾಡದಂತೆ ಬಿಜೆಪಿ ಕಾರ್ಯಕರ್ತರು ಹಾಗೂ ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.
ಮಧ್ಯಪ್ರದೇಶದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಇದೀಗ ಕೆಲವ ಕ್ಷಣಗಳಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆ ದಟ್ಟವಾಗಿದೆ.
ಕಳೆದ ಶುಕ್ರವಾರ ಕಾಂಗ್ರೆಸ್ನಿಂದ ಬಂಡಾಯವೆದ್ದಿದ್ದ 22 ಶಾಸಕರು ರಾಜೀನಾಮೆ ಬಿಜೆಪಿ ಸೇರಿಕೊಂಡಿದ್ದರಿಂದ ಮುಖ್ಯಮಂತ್ರಿ ಕಮಲ್ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಂಡಿತ್ತು. ಇಂದು ರಾತ್ರಿ 9 ಗಂಟೆಗೆ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ನಾಲ್ಕನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಲಾಲ್ಜಿ ಟಂಡನ್ ಶಿವರಾಜ್ ಸಿಂಗ್ ಚೌಹಾಣ್‌ಗೆ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಕೇವಲ 40 ಮಂದಿ ಭಾಗಿಯಾಗಲಿದ್ದು, ಶಿವರಾಜ್ ಸಿಂಗ್ ಚೌಹಾಣ್ ಏಕಾಂಗಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.