ನವದೆಹಲಿ: ಮಹತ್ವದ ಬೆಳವಣಿಗೆ ಒಂದರಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂದಿಯಾ ರಾಜೀನಾಮೆ ನೀಡಿದ್ದಾರೆ. ಈ ಸಂಬಂದ ಅವರು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಕಾಂಗ್ರೆಸ್ ಯುವ ನಾಯಕ ಜ್ಯೋತಿರಾದಿತ್ಯ ಸಿಂದಿಯಾ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಹಲವು ಅಚ್ಚರಿಗೆ ಕಾರಣವಾಗಿತ್ತು ಪ್ರಧಾನಿ ನಿವಾಸಕ್ಕೆ ಭೇಟಿ ನೀಡಿದ ಜ್ಯೋತಿರಾದಿತ್ಯ ಸಿಂದಿಯಾ ಈಗ ಪಿಎಂ ನಿವಾಸದಿಂದ ವಾಪಸ್ ಆದ ಬಳಿಕ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಪಕ್ಷದಿಂದಲೇ ಸಿಂದಿಯಾ ಉಚ್ಛಾಟನೆ:
ಇನ್ನೊಂದೆಡೆ ಕಮಲನಾಥ್ ಸರ್ಕಾರ ಉಳಿಸಿಕೊಳ್ಳುವ ಪ್ರಯತ್ನ ಮುಂದುವರೆಸಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅಷ್ಟೇ ಅಲ್ಲ ಅತ್ತ ಪಕ್ಷದ ಅಧ್ಯಕ್ಷೆಗೆ ಜ್ಯೋತಿರಾದಿತ್ಯ ಸಿಂದಿಯಾ ರಾಜೀನಾಮೆ ನೀಡುತ್ತಿದ್ದಂತೆ ಅವರನ್ನ ಪಕ್ಷದಿಂದ ಉಚ್ಛಾಟಿಸಲಾಗಿದೆ.
ಈ ಸಂಬಂಧ ಮಾತನಾಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ, ಕೆ ಸಿ ವೇಣುಗೋಪಾಲ್, ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಸಿಂದಿಯಾ ಅವರನ್ನ ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಪಕ್ಷದಿಂದ ಉಚ್ಛಾಟನೆ ಮಾಡಲು ಅನುಮತಿ ನೀಡಿದ್ದಾರೆ ಎಂದು ಪ್ರಕಟಿಸಿದರು.
ಸ್ಪೀಕರ್ಗೆ ರಾಜೀನಾಮೆ ಸಲ್ಲಿಸಿದ 19 ಶಾಸಕರು?
ಮಧ್ಯಪ್ರದೇಶ ರಾಜಕೀಯ ಈಗ ದೆಹಲಿ ಅಂಗಳವನ್ನ ತಲುಪಿದೆ. 25 ಕ್ಕೂ ಹೆಚ್ಚು ಶಾಸಕರು ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಹಲವರು ಬೆಂಗಳೂರಿಗೆ ಶಿಫ್ಟ್ ಆಗಿದ್ದಾರೆ. ಈ ಮಧ್ಯೆ ಬೆಂಗಳೂರಿನಲ್ಲಿ ಬೀಡು ಬಿಟ್ಟಿರುವ ಎಲ್ಲ 24 ಶಾಸಕರು ಇಂದೇ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇನ್ನೊಂದು ಮೂಲದ ಪ್ರಕಾರ 19 ಶಾಸಕರು ಸ್ಪೀಕರ್ಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ ಎಂಬ ಮಾಹಿತಿಯೂ ಸಿಕ್ಕಿದೆ.
ಇಂದೇ ಭೋಪಾಲ್ಗೆ ತೆರಳಿ ಸ್ಪೀಕರ್ಗೆ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ. ಈ ಸಂಬಂಧ ಶಾಸಕರು ಸ್ಪೀಕರ್ಗೆ ಮಾಹಿತಿ ನೀಡಿದ್ದಾರೆ.
ಮತ್ತೊಂದೆಡೆ, ಭೋಪಾಲ್ ಬಿಜೆಪಿ ಕಚೇರಿಯಲ್ಲಿ ಕಮಲ ನಾಯಕರು ಮೀಟಿಂಗ್ ನಡೆಸುತ್ತಿದ್ದಾರೆ. ಸಭೆಯಲ್ಲಿ ಮಾಜಿ ಸಿಎಂ ಶಿವರಾಜ ಸಿಂಗ್ ಚೌಹಾಣ್, ವಿಡಿ ಶರ್ಮಾ, ವಿನಯ್ ಸಹಸ್ರಬುದ್ಧಿ ಹಾಜರಿದ್ದಾರೆ. ಈ ನಡುವೆ, ಮಧ್ಯಪ್ರದೇಶ ಕಾಂಗ್ರೆಸ್ ನಾಯಕ ಪಿ.ಸಿ. ಶರ್ಮಾ ಮಾತನಾಡಿ, ನಾವು ನಮ್ಮ ನಾಯಕರ ಜತೆ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ. ನಮ್ಮ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ. ಸರ್ಕಾರ ಐದು ವರ್ಷ ಪೂರ್ಣಗೊಳ್ಳುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.