ನವದೆಹಲಿ:ರಾಷ್ಟ್ರ ರಾಜಧಾನಿಯಲ್ಲಿ ವಾಯು ಗುಣಮಟ್ಟದ ಸೂಚ್ಯಂಕ 600ರ ಗಡಿ ದಾಟಿದ್ದು, ಜನ ಆತಂಕಕ್ಕೀಡಾಗಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರವು ಪಂಜಾಬ್, ಹರಿಯಾಣ ಮತ್ತು ದೆಹಲಿಯ ಹಿರಿಯ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದೆ.
ಪ್ರಧಾನಿ ಮೋದಿ ಅವರ ಪ್ರಧಾನ ಕಾರ್ಯದರ್ಶಿ ಪಿ.ಕೆ.ಮಿಶ್ರಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಪಂಜಾಬ್, ಹರಿಯಾಣ ಮತ್ತು ದೆಹಲಿಯ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ, ವಾಯುಮಾಲಿನ್ಯವನ್ನು ಕಡಿಮೆ ಮಾಡಲು ದೆಹಲಿಯಲ್ಲಿ ಸುಮಾರು 300 ತಂಡಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಪ್ರಧಾನ ಕಾರ್ಯದರ್ಶಿಗೆ ಮಾಹಿತಿ ನೀಡಲಾಗಿದೆ. ಅಲ್ಲದೆ ಈ ಕಾರ್ಯಕ್ಕೆ ಅಗತ್ಯವಾದ ಯಂತ್ರೋಪಕರಣಗಳನ್ನು ಎಲ್ಲ ರಾಜ್ಯಗಳಲ್ಲಿ ವಿತರಿಸಲಾಗಿದೆ ಎಂದು ಹೇಳಲಾಗಿದೆ.