ನವದೆಹಲಿ:ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನಾಳೆಗೆ ಮುಂದೂಡಿದೆ.
ಇಂದು ವಿಚಾರಣೆ ಆರಂಭವಾಗುತ್ತಿದ್ದಂತೆ ಡಿಕೆಶಿ ಪರ ವಕೀಲರು, ವಿಚಾರಣೆ ನಾಳೆಗೆ ಮುಂದೂಡುವಂತೆ ಮನವಿ ಮಾಡಿದರು. ಹಾಗಾಗಿ ನಾಳೆ ಮಧ್ಯಾಹ್ನ 3.30ಕ್ಕೆ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮುಂದೂಡಿದೆ.
ಇದೇ ವೇಳೆ ಕೋರ್ಟ್ಗೆ ಇಡಿ ಅಧಿಕಾರಿಗಳು ತನಿಖಾ ಪ್ರಗತಿ ವರದಿ ಸಲ್ಲಿಸಿದ್ದಾರೆ. ಗುರುವಾರ ಹಾಗೂ ಶುಕ್ರವಾರ ಇಡಿ ಪರ ವಕೀಲರು ವಾದ ಮಂಡಿಸಲಿದ್ದಾರೆ. ಇನ್ನು ನಾಳೆ ಮಧ್ಯಾಹ್ನ 3.30ಕ್ಕೆ ಡಿಕೆಶಿ ಪರ ಅಭಿಶೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ.
ಈ ಹಿಂದೆ ಅಕ್ಟೋಬರ್ 15ರವರೆಗೆ ಡಿಕೆಶಿ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಇಡಿ ದೆಹಲಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ಹೀಗಾಗಿ ನಾಳೆಯೇ ಡಿಕೆಶಿಯವರ ಬಂಧನ ಅವಧಿಯ ಕೊನೆಯ ದಿನವಾಗಿದೆ. ಇನ್ನು ನಾಳೆಯೇ ಜಾಮೀನು ಅರ್ಜಿಯ ವಿಚಾರಣೆ ಕೂಡ ನಡೆಯಲಿದೆ.
ಅಕ್ರಮ ಹಣ ಪತ್ತೆ ಮತ್ತು ಬೇನಾಮಿ ಆಸ್ತಿ ಹೊಂದಿರುವ ಆರೋಪದ ಮೇಲೆ ಬಂಧಿತರಾಗಿರುವ ಡಿ.ಕೆ.ಶಿವಕುಮಾರ್ ಅವರನ್ನು ಸೆ. 3ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು.