ನವದೆಹಲಿ:ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಬಲಿಯಾದವರ ಸಂಖ್ಯೆ 22ಕ್ಕೆ ಏರಿಕೆಯಾಗಿದ್ದು, 100ಕ್ಕೂ ಹೆಚ್ಚುಮಂದಿ ಗಾಯಗೊಂಡಿದ್ದಾರೆ.
ಆಸ್ಪತ್ರೆಗೆ ಕರೆತಂದಾಗಲೇ ಐವರ ಸ್ಥಿತಿ ಗಂಭೀರವಾಗಿತ್ತು, ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ ಎಂದು ಜಿಬಿಟಿ ಆಸ್ಪತ್ರೆ ಮೂಲಗಳು ತಿಳಿಸಿವೆ.
ಅಲುಮ್ನಿ ಅಸೋಸಿಯೇಶನ್ ಆಫ್ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಜಾಮಿಯಾ ಸಮನ್ವಯ ಸಮಿತಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮುಂಭಾಗ ತಡರಾತ್ರಿ ಪ್ರತಿಭಟನೆ ನಡೆಸಿದೆ. ಹಿಂಸಾಚಾರ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು, ಶಾಂತಿ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
ಗೃಹ ಸಚಿವ ಅಮಿತ್ ಶಾ ದೆಹಲಿ ಪೊಲೀಸ್ ಮತ್ತು ಗೃಹ ಸಚಿವಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಹೊಸದಾಗಿ ನೇಮಕಗೊಂಡ ವಿಶೇಷ ಪೊಲೀಸ್ ಆಯುಕ್ತ ಎಸ್.ಎನ್. ಶ್ರೀವಾಸ್ತವ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಇತ್ತ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಖಾಸಗಿ ಟಿವಿ ಚಾನೆಲ್‌ಗಳಿಗೆ ಹಿಂಸಾಚಾರ ಬೆಂಬಲಿಸುವಂತ ಸುದ್ದಿ ಪ್ರಸಾರ ಮಾಡದಂತೆ ಸಲಹೆ ನೀಡಿದೆ.
ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಖಾಸಗಿ ಮತ್ತು ಸರ್ಕಾರಿ ಶಾಲೆಗಳನ್ನು ಇಂದೂ ಕೂಡ ಮುಚ್ಚಲಾಗುವುದು ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ತಿಳಿಸಿದ್ದು, ಈ ಶಾಲೆಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದಿದ್ದಾರೆ.
ಈಶಾನ್ಯ ದೆಹಲಿಯ ವಿವಿಧ ಭಾಗಗಳಲ್ಲಿನ ಭದ್ರತಾ ಪರಿಸ್ಥಿತಿಯನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಪರಿಶೀಲನೆ ನಡೆಸಿದ್ದಾರೆ. ತಡರಾತ್ರಿ ಈಶಾನ್ಯ ದೆಹಲಿಯ ವಿವಿಧ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.