ನವದೆಹಲಿ:ಕೇಂದ್ರ ಸರ್ಕಾರದ ಪ್ರಸ್ತಾಪದ ಬಗ್ಗೆ ರೈತರೊಂದಿಗೆ ಚರ್ಚೆ ನಡೆಸಿದ್ದೇವೆ. ಆದರೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಕೇಂದ್ರ ಸರ್ಕಾರ ಮುಂದಿಟ್ಟಿದ್ದ ಪ್ರಸ್ತಾಪವನ್ನು ರೈತರು ತಿರಸ್ಕರಿಸಿದ್ದಾರೆ ಎಂಬುದು ಮಾಧ್ಯಮಗಳ ಮೂಲಕ ಗೊತ್ತಾಯಿತು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ.
ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ವಿಶ್ವಾಸ ಇದೆ. ಹೀಗಾಗಿ ರೈತ ಸಂಘಟನೆಗಳು ಡೆಡ್‌ಲಾಕ್ ಹಿಂಪಡೆಯಬೇಕು. ಕಾಯ್ದೆಗಳ ಬಗ್ಗೆ ವಿರೋಧಗಳಿದ್ದರೆ ಚರ್ಚೆ ನಡೆಸೋಣ ಎಂದಿದ್ದಾರೆ.
ರೈತರಿಗೆ ಇರುವ ಗೊಂದಲಗಳನ್ನು ನಿವಾರಿಸುವ ಪ್ರಯತ್ನವನ್ನು ಮಾಡಲಾಗಿದೆ. ಪ್ರತಿಭಟನೆಯನ್ನು ಕೈಬಿಟ್ಟು ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳಬೇಕು. ಸರ್ಕಾರ ಮಾತುಕತೆಗೆ ಸಿದ್ಧವಿದೆ ಎಂದು ಸಚಿವರು ಪುನರುಚ್ಛರಿಸಿದ್ದಾರೆ.
ದೇಶದಲ್ಲಿನ ರೈತರ ಜೀವನ ಮಟ್ಟವನ್ನು ಸುಧಾರಿಸುವ ಸಲುವಾಗಿ ನೂತನ ಕಾಯ್ದೆ ಮೂಲಕ ಬದಲಾವಣೆಗಳನ್ನು ತರಲಾಗಿದೆ. ಹಲವು ವರ್ಷಗಳಿಂದ ನಡೆಯುತ್ತಿದ್ದ ತಾರತಮ್ಯಗಳಿಗೆ ನೂತನ ಕಾಯ್ದೆ ಮೂಲಕ ತಡೆ ನೀಡಲಾಗಿದೆ. ಇದರಿಂದಾಗಿ ಅನ್ನದಾತರು ಉತ್ತಮ ಜೀವನ ನಡೆಸಲು ಸಾಧ್ಯವಾಗಲಿದೆ ಎಂದರು.
ಪ್ರತಿಭಟನೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ದೆಹಲಿ ಮಂದಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಜನಸಾಮಾನ್ಯರ ಹಿತದೃಷ್ಟಿಯಿಂದ ಪ್ರತಿಭಟನೆ ಹಿಂಪಡೆದು ಮಾತುಕತೆಗೆ ಮುಂದಾಗಬೇಕು ಎಂದು ಪ್ರತಿಭಟನಾ ನಿರತರ ರೈತರಲ್ಲಿ ತೋಮರ್ ಮನವಿ ಮಾಡಿದ್ದಾರೆ.