ಪಾಲಂಪುರ್ (ಹಿಮಾಚಲ ಪ್ರದೇಶ): ಒಂದು ವೇಳೆ ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗಿದ್ದರೆ ಕೋವಿಡ್ ನಿರ್ವಹಿಸುವಲ್ಲಿ ವಿಫಲರಾಗುತ್ತಿದ್ದು, ಇನ್ನೂ ಹೆಚ್ಚು ಮಂದಿ ಕೊರೊನಾಗೆ ಬಲಿಯಾಗುತ್ತಿದ್ದರು ಎಂದು ಹಿಮಾಚಲ ಪ್ರದೇಶದ ಅರಣ್ಯ ಖಾತೆ ಸಚಿವ ರಾಕೇಶ್ ಪಥಾನಿಯಾ ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲೆಯ ಜೈಸಿಂಘಾಪುರ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು, ರಾಷ್ಟ್ರೀಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪ್ರಧಾನಿ ಮೋದಿ ಅವರ ನಾಯಕತ್ವ ಕೋವಿಡ್ ಪರಿಸ್ಥಿತಿಯನ್ನು ಸರಿಯಾಗಿ ನಿರ್ವಹಿಸುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ ಅವರು, ಪ್ರಸ್ತುತ ಸಮಯದಲ್ಲಿ ರಾಹುಲ್ ಪ್ರಧಾನಿಯಾಗಿದ್ದರೆ ಇನ್ನಷ್ಟು ಸಾವು-ನೋವುಗಳು ಸಂಭವಿಸುತ್ತಿದ್ದವು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಫ್ರಾನ್ಸ್ ಹಾಗೂ ಇಟಲಿಯಂತಹ ದೇಶಗಳು ಕೊರೊನಾದಿಂದ ನಾಶವಾಗಿವೆ. ಈ ರಾಷ್ಟ್ರಗಳಲ್ಲಿ ಕೊರೊನಾ ಸಾಕಷ್ಟು ಮಂದಿಯನ್ನು ಬಲಿ ತೆಗೆದುಕೊಂಡಿದ್ದು, ಸಾವಿನ ಪ್ರಮಾಣ ಹೆಚ್ಚಿದೆ. ಭಾರತದಲ್ಲಿ ಮರಣ ಪ್ರಮಾಣ ಕಡಿಮೆಯಾಗಿರುವುದಕ್ಕೆ ಮೋದಿ ನಾಯಕತ್ವವೇ ಕಾರಣ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಹಿಮಾಚಲ ಪ್ರದೇಶದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಸಿಎಂ ಹುದ್ದೆಗಾಗಿ ಕಾಂಗ್ರೆಸ್ನಲ್ಲಿ ಆಂತರಿಕ ಕಚ್ಚಾಟ ಆರಂಭವಾಗಿದೆ. ಸುಮಾರು 14 ಮಂದಿ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಹುದ್ದೆಯ ರೇಸ್ನಲ್ಲಿದ್ದು, ಕಾಂಗ್ರೆಸ್ ಉಳಿಯಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದರ ಜೊತೆಗೆ ಕಾಂಗ್ರೆಸ್ ತಮ್ಮ ನಾಯಕರಿಗೆ ಕ್ರಿಕೆಟ್ ಆಡಲು ಬಿಟ್ಟು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆರಿಸಬೇಕು ಎಂದು ರಾಕೇಶ್ ಪಥಾನಿಯಾ ವ್ಯಂಗ್ಯವಾಡಿದ್ದಾರೆ.