ನವದೆಹಲಿ: ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಬರುವ ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಆಡಳಿತ ಪಕ್ಷ ಬಿಜೆಪಿ ಹಾಗೂ ಕಾಂಗ್ರೆಸ್ ಗದ್ದುಗೆಗಾಗಿ ಗುದ್ದಾಟ ನಡೆಸುತ್ತಿವೆ. ಈ ಬೆಳವಣಿಗೆಗಳ ನಡುವೆ ಕಾಂಗ್ರೆಸ್ ಪಕ್ಷಕ್ಕೆ ಅತಿದೊಡ್ಡ ಗುದ್ದು ಬಿದ್ದಿದೆ.
ಹರಿಯಾಣ ಪ್ರದೇಶ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ಅಶೋಕ್ ತನ್ವರ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ತಿಂಗಳು ಅಧ್ಯಕ್ಷ ಸ್ಥಾನಕ್ಕೆ ಮಾಜಿ ಕೇಂದ್ರ ಸಚಿವೆ ಹಾಗೂ ದಲಿತ ನಾಯಕಿ ಕುಮಾರಿ ಸೆಲ್ಜಾ ಅವರನ್ನು ನೇಮಕ ಮಾಡಿ ಪಕ್ಷ ಆದೇಶ ಹೊರಡಿಸಿತ್ತು. ಇದಾದ ಬಳಿಕ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿತ್ತು. ಇದೀಗ ಅದು ಸ್ಫೋಟಗೊಂಡಿದ್ದು,ಅಶೋಕ್ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು,ಇದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ್ದಾರೆ.