ಹಥ್ರಾಸ್ (ಉತ್ತರಪ್ರದೇಶ):ಹಥ್ರಾಸ್ಸಂತ್ರಸ್ತೆಯ ಕುಟುಂಬಕ್ಕೆ ಸಾಂತ್ವನ ಹೇಳಲು ಭೇಟಿ ನೀಡಿದ್ದ ಸಂದರ್ಭದಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಸೇರಿದಂತೆ ಸುಮಾರು 400 ಮಂದಿ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 144 ಮತ್ತು ಸೆಕ್ಷನ್ 188 ಉಲ್ಲಂಘಿಸಿದ್ದಾರೆ ಎಂಬ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.
ಭಾನುವಾರ ಹಥ್ರಾಸ್ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ್ದ ಆಜಾದ್ ಮಾಧ್ಯಮದೊಂದಿಗೆ ಮಾತನಾಡಿದ್ದು, "ಸಂತ್ರಸ್ತೆಯ ಕುಟುಂಬಕ್ಕೆ ಅಸುರಕ್ಷಿತ ಭಾವನೆ ಇರುವ ಹಿನ್ನೆಲೆಯಲ್ಲಿ ಅವರಿಗೆ Y+ ಭದ್ರತೆ ನೀಡಬೇಕು. ಸಿಬಿಐ ವಿಚಾರಣೆಯು ಹೆಚ್ಚು ಸಮಯ ತೆಗೆದುಕೊಳ್ಳುವುದರಿಂದ ಪ್ರಕ್ರಿಯೆಯನ್ನು ವಿಳಂಬಗೊಳಿಸುತ್ತದೆ. ಹೀಗಾಗಿ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಾಧೀಶರು ಹಥ್ರಾಸ್ ಘಟನೆ ಕುರಿತು ವಿಚಾರಣೆ ನಡೆಸಬೇಕು" ಎಂದು ಆಗ್ರಹಿಸಿದರು.