ನವದೆಹಲಿ: ಸಂಪೂರ್ಣವಾಗಿ ಆರೋಗ್ಯವಾಗಿದ್ದು, ಯಾವುದೇ ತೊಂದರೆ ಅಥವಾ ಅನಾರೋಗ್ಯದಿಂದ ಬಳಲುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.
ಅಮಿತ್ ಶಾ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹಬ್ಬುತ್ತಿದ್ದಂತೆ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ ಸಚಿವರು, ನನ್ನ ಆರೋಗ್ಯದ ಬಗ್ಗೆ ಯಾವುದೇ ಚಿಂತೆ ಮಾಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ 55 ವರ್ಷದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ನನ್ನ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿದ್ದು, ಅದಕ್ಕೆ ನಾನು ಸ್ಪಷ್ಟನೆ ನೀಡುತ್ತಿದ್ದೇನೆ. ನಾನು ಯಾವುದೇ ಸೋಂಕು ಅಥವಾ ಕಾಯಿಲೆಯಿಂದ ಬಳಲುತ್ತಿಲ್ಲ ಎಂದಿದ್ದಾರೆ. ನಾನು ನಿಮ್ಮ ಬಳಿ ಮನವಿ ಮಾಡಿಕೊಳ್ಳುತ್ತಿದ್ದು, ನನ್ನ ಆರೋಗ್ಯದ ಬಗ್ಗೆ ಮಾತನಾಡುವುದು ಬಿಟ್ಟು ಕೆಲಸ ಮಾಡುವುದಕ್ಕೆ ಬಿಡಿ. ನೀವೂ ನಿಮ್ಮ ಕೆಲಸ ಮಾಡಿ ಎಂದಿದ್ದು, ನನ್ನ ಆರೋಗ್ಯದ ಬಗ್ಗೆ ವಿಶ್ ಮಾಡಿದವರಿಗೆ ಧನ್ಯವಾದಗಳು ಎಂದಿದ್ದಾರೆ.
ಅಹಮದಾಬಾದ್ ಪೊಲೀಸರಿಂದ ಸುದ್ದಿಗೋಷ್ಠಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೊನಾ ಇದೆ ಎಂದು ಸುದ್ದಿ ಹಬ್ಬಿಸಿದ್ದ ನಾಲ್ವರು ಆರೋಪಿಗಳನ್ನ ಗುಜರಾತ್ನ ಅಹಮದಾಬಾದ್ ಪೊಲೀಸರು ಬಂಧಿಸಿದ್ದಾರೆ. ಇವರನ್ನ ಫಿರೋಜ್ ಖಾನ್, ಸರ್ಫರಾಜ್, ಸಾಝಿದ್ ಅಲಿ ಹಾಗೂ ಶಾರಿಜ್ ಹುಸೇನ್ ಎಂದು ಗುರುತಿಸಲಾಗಿದೆ ಎಂದು ಅಹಮದಾಬಾದ್ ಕ್ರೈಂ ಬ್ರಾಂಚ್ ಅಜಯ್ ತೋಮರ್ ಮಾಹಿತಿ ನೋಡಿದ್ದಾರೆ.