ಹೈದರಾಬಾದ್ (ತೆಲಂಗಾಣ):ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ ಸಹೋದರಿ ವೈ.ಎಸ್. ಶರ್ಮಿಳಾ ಅವರು ತೆಲಂಗಾಣದಲ್ಲಿ ರಾಜಕೀಯ ಪಕ್ಷವನ್ನು ಪ್ರಾರಂಭಿಸಲು ಯೋಜನೆ ರೂಪಿಸಿದ್ದಾರೆ ಎಂಬ ವದಂತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
2004 ರಿಂದ 2009 ರವರೆಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದ ದಿವಂಗತ ವೈ.ಎಸ್.ರಾಜಶೇಖರ ರೆಡ್ಡಿ ಅವರ ಮಗ ವೈ.ಎಸ್ ಜಗನ್ ಮೋಹನ್ ರೆಡ್ಡಿ ಈಗಾಗಲೇ ರಾಜಕೀಯದಲ್ಲಿ ಸಾಕಷ್ಟು ಹೆಸರು ಗಳಿಸಿದ್ದು, ಆಂಧ್ರ ಮುಖ್ಯಮಂತ್ರಿಯಾಗಿದ್ದಾರೆ. ಇನ್ನು ಪುತ್ರಿ ಶರ್ಮಿಳಾ ಅವರು ರಾಜಕೀಯ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ಶರ್ಮಿಳಾ ತನ್ನ ಸಹೋದರ ಜಗನ್ ಅವರ ಹಸ್ತಕ್ಷೇಪವಿಲ್ಲದೇ ತೆಲಂಗಾಣದಲ್ಲಿ ರಾಜಕೀಯ ಪಕ್ಷವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದಾರೆ ಎಂದು ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ವದಂತಿಗಳು ಹರಿದಾಡುತ್ತಿವೆ. ದಿವಂಗತ ರಾಜಶೇಖರ ರೆಡ್ಡಿ ಮತ್ತು ಅವರ ಆಪ್ತರೊಂದಿಗೆ ನಿಕಟ ಸಂಬಂಧ ಹೊಂದಿದ್ದ ಕೆಲವು ಪ್ರಮುಖ ಕಾಂಗ್ರೆಸ್ ನಾಯಕರೊಂದಿಗೆ ಅವರು ಸಂಪರ್ಕದಲ್ಲಿದ್ದಾರೆ ಎನ್ನಲಾಗ್ತಿದೆ.