ನವದೆಹಲಿ: ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ 17 ಬಂಡಾಯ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಅನರ್ಹಗೊಳಿಸಿದ್ದ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಅವರ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಬುಧವಾರ ಎತ್ತಿಹಿಡಿದಿತ್ತು. ಜೊತೆಗೆ ಮುಂಬರುವ ಉಪಚುನಾವಣೆಯಲ್ಲಿ ಅವರು ರಾಜ್ಯದಲ್ಲಿ ಸ್ಪರ್ಧಿಸಬಹುದು ಎಂದು ಸುಪ್ರೀಂ ತೀರ್ಪು ನೀಡಿದೆ. ಈ ಬೆನ್ನಲ್ಲೇ 16 ಅನರ್ಹ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡರು. ಇವರಲ್ಲಿ 13 ಜನರಿಗೆ ಬಿಜೆಪಿ ಉಪಚುನಾವಣೆ ಟಿಕೆಟ್ ಸಹ ನೀಡಿದೆ.
ಕರ್ನಾಟಕ ರಾಜಕೀಯದಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ: ಕೆ.ಸಿ. ವೇಣುಗೋಪಾಲ್ - KCvenugopal press release about BJP
ಬಿಜೆಪಿ ಅವಕಾಶವಾದಿ ಮತ್ತು ಅಧಿಕಾರ ದಾಹಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್ ಉಸಸ್ತುವಾರಿ ಕೆ.ಸಿ. ವೇಣುಗೋಪಾಲ್ ಆರೋಪಿಸಿದ್ದಾರೆ. ಅಲ್ಲದೆ, ಕರ್ನಾಟಕದ ರಾಜಕೀಯದಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಅವರು ದೂರಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು, ಬಿಜೆಪಿ ಅವಕಾಶವಾದಿ ಮತ್ತು ಅಧಿಕಾರದಾಹಿ ಎಂದು ಆರೋಪಿಸಿದ್ದಾರೆ. ಡಿಸೆಂಬರ್ 5 ರ ಉಪಚುನಾವಣೆಗೆ ಅನರ್ಹ ಶಾಸಕರಿಗೆ ಟಿಕೆಟ್ ನೀಡಿದ ಕುರಿತು ಪ್ರತಿಕ್ರಿಯಿಸಿದ ಅವರು, ಕರ್ನಾಟಕದ ಜನರು ಇದಕ್ಕೆ ಸೂಕ್ತ ಉತ್ತರ ನೀಡುತ್ತಾರೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ರಾಜಕೀಯ ಕುದುರೆ ವ್ಯಾಪಾರ ನಡೆಯುತ್ತಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಕೆಲವೇ ಗಂಟೆಗಳ ನಂತರ ಅನರ್ಹ ಶಾಸಕರಿಗೆ ಬಿಜೆಪಿ ಟಿಕೆಟ್ ನೀಡಿದೆ. ಈ ಮೂಲಕ ಬಿಜೆಪಿ ಪಕ್ಷಾಂತರ, ಕುದುರೆ ವ್ಯಾಪಾರವನ್ನು ಪ್ರೋತ್ಸಾಹಿಸಿದೆ ಎಂದು ಸಾಬೀತಾಗಿದೆ. ಇದರಿಂದ ಆ ಪಕ್ಷದ ನಾಯಕರು ನೈತಿಕತೆ ಕಳೆದುಕೊಂಡಿದ್ದಾರೆ ಎಂದು ವೇಣುಗೋಪಾಲ್ ಟೀಕಿಸಿದ್ದಾರೆ.