ಬೆಂಗಳೂರು: ಕೊರೊನಾ ವೈರಸ್ ಸೋಂಕಿನ ಆತಂಕದ ನಡುವೆಯೇ ರಾಜ್ಯಸಭಾ ಚುನಾವಣೆಯ ಕಾವು ಜೋರಾಗಿದೆ. ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆಯವರನ್ನು ರಾಜ್ಯಸಭೆ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ.
ರಾಜ್ಯಸಭೆ ಚುನಾವಣಾ ಅಖಾಡಕ್ಕೆ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಖರ್ಗೆ ಸ್ಪರ್ಧಿಸಲಿದ್ದಾರೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಘೋಷಣೆ ಮಾಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕರ್ನಾಟಕದಿಂದ ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಅಂತಿಮಗೊಳಿಸಿದ್ದಾರೆ. ಕಾಂಗ್ರೆಸ್ ನಾಯಕರಾದ ಬಿ.ಕೆ.ಹರಿಪ್ರಸಾದ್, ಪ್ರೊ. ರಾಜೀವ್ ಗೌಡ ರಾಜ್ಯಸಭೆ ಅವಧಿ ಜೂನ್ 25ಕ್ಕೆ ಮುಕ್ತಾಯವಾಗಲಿದೆ. ಹೀಗಾಗಿ ಜೂನ್ 19ರಂದು ದ್ವೈವಾರ್ಷಿಕ ರಾಜ್ಯಸಭೆ ಚುನಾವಣೆ ನಡೆಯಲಿದೆ. ಕರ್ನಾಟಕದಿಂದ ನಿರೀಕ್ಷೆಯಂತೆಯೇ ಮಲ್ಲಿಕಾರ್ಜುನ ಖರ್ಗೆಯವರು ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ.
ಬಿಜೆಪಿ, ಜೆಡಿಎಸ್ನಲ್ಲೂ ರಾಜ್ಯಸಭಾ ಟಿಕೆಟ್ಗಾಗಿ ಪೈಪೋಟಿ ನಡೆಯುತ್ತಿದೆ. ಎರಡೂ ಪಕ್ಷಗಳ ಅಭ್ಯರ್ಥಿಗಳ ಹೆಸರು ಸದ್ಯದಲ್ಲೇ ಫೈನಲ್ ಆಗಲಿದೆ. ಜೆಡಿಎಸ್ನಿಂದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಆಯ್ಕೆ ಬಹುತೇಕ ಖಚಿತವಾಗಿದೆ. ಆದರೆ ಬಿಜೆಪಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಮುಂದುವರೆದಿದೆ. ಹಾಲಿ ಸಂಸದ ಪ್ರಭಾಕರ್ ಕೋರೆ, ಮಾಜಿ ಸಂಸದ ಹಾಗೂ ಉಮೇಶ್ ಕತ್ತಿ ಸಹೋದರ ರಮೇಶ್ ಕತ್ತಿ, ಮಾಜಿ ಕೇಂದ್ರ ಸಚಿವ ದಿ.ಅನಂತ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ ಕುಮಾರ್, ಕರ್ನಾಟಕದ ಬಿಜೆಪಿ ಉಸ್ತುವಾರಿಯಾಗಿದ್ದ ಮುರಳೀಧರರಾವ್, ರಾಜ್ಯಸಭಾ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಅಚ್ಚರಿ ಎಂಬಂತೆ ಕೆ ವಿ ಕಾಮತ್ ಅವರು ಸಹ ಬಿಜೆಪಿ ಹೈಕಮಾಂಡ್ ಅಭ್ಯರ್ಥಿಯಾಗಿ ಆಯ್ಕೆಯಾಗುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ.