ಬರೇಲಿ: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದ್ದು, ಕಳ್ಳತನದ ಆರೋಪದ ಮೇಲೆ ವ್ಯಕ್ತಿಯೊಬ್ಬನಿಗೆ ಗ್ರಾಮಸ್ಥರು ಹೊಡೆದು ಸಾಯಿಸಿದ್ದಾರೆ.
ಪೊಲೀಸರ ಮಾಹಿತಿಯ ಪ್ರಕಾರ, ವಾಸಿತ್ ಹೆಸರಿನ ವ್ಯಕ್ತಿಯೊಬ್ಬ ಮದ್ಯದ ಅಮಲಿನಲ್ಲಿ ಅವೋನ್ಲಾ ಸಮೀಪದ ನಲ್ಕೂಪ್ ಕಾಲೊನಿಯ ಬಳಿ ನಡೆದುಕೊಂಡು ಹೋಗುತ್ತಿದ್ದ. ಆ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ, ಆ ಯುವಕ ಕಳ್ಳತನ ಮಾಡಿದ್ದಾನೆಂದು ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಾನೆ. ಇದನ್ನು ಕೇಳಿದ ಗ್ರಾಮಸ್ಥರೆಲ್ಲ ಸ್ಥಳದಲ್ಲಿ ಸೇರಿ, ಯುವಕನಿಗೆ ಮನಸೋ ಇಚ್ಛೆ ಥಳಿಸಿದ್ದಾರೆ. ಅಲ್ಲದೆ ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು, ಗ್ರಾಮಸ್ಥರು ಯುವಕನಿಗೆ ಥಳಿಸುವುದನ್ನು ನಿಲ್ಲಿಸಿದ್ದಾರೆ. ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಯುವಕನ್ನು ಪೊಲೀಸರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವನ್ನಪ್ಪಿದ್ದಾನೆ.
ಪೊಲೀಸರ ಮಾಹಿತಿ ಪ್ರಕಾರ, ಮೇಲ್ನೋಟಕ್ಕೆ ಯುವಕನ ದೇಹದಲ್ಲಿ ಯಾವುದೇ ಗಾಯಗಳಿರಲಿಲ್ಲ. ಹೀಗಾಗಿ ಸ್ಥಳೀಯರಾಗಲಿ, ಕುಟುಂಸ್ಥರಾಗಲಿ ಆತನನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಿಲ್ಲ. ಯುವಕನಿಗೆ ತಲೆಯ ಭಾಗಕ್ಕೆ ಪೆಟ್ಟಾಗಿದ್ದು, ಹೀಗಾಗಿ ಯುವಕ ಸಾವನನ್ನಪ್ಪಿದ್ದಾನೆ ಎಂದು ಬರೇಲಿ ಎಸ್ಪಿ ತಿಳಿಸಿದ್ದಾರೆ.
ಪ್ರಕರಣ ಸಂಬಂಧ 10 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.