ಹೈದರಾಬಾದ್(ತೆಲಂಗಾಣ): ಖಮ್ಮಂ ಜಿಲ್ಲೆಯ ಗ್ರಾಮವೊಂದರಲ್ಲಿ ಅಮಾನವೀಯ ಪ್ರಕರಣ ನಡೆದಿದೆ. 36 ವರ್ಷದ ಮಹಿಳೆಯನ್ನು ಮನೆಯಿಂದ ಅಪಹರಿಸಿದ ಕಾಮುಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಶುಕ್ರವಾರ ರಾತ್ರಿಯೇ ದುಷ್ಕರ್ಮಿಗಳು ಸಂತ್ರಸ್ತೆಯ ಮನೆಗೆ ನುಗ್ಗಿ ಬೆದರಿಕೆ ಹಾಕಿ, ನಂತರ ಹತ್ತಿರದ ಹತ್ತಿ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಅಪಹರಣ ನಡೆದಾಗ ಸಂತ್ರಸ್ತೆಯ ಪತಿ ಮತ್ತೊಂದು ಕೋಣೆಯಲ್ಲಿ ಮಲಗಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಪೊಲೀಸ್ ಗಸ್ತು ವಾಹನ ಸಮೀಪಿಸುತ್ತಿರುವುದನ್ನು ನೋಡಿ ಆರೋಪಿಗಳು ಪರಾರಿಯಾದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಹೆಡೆಮುರಿ ಕಟ್ಟಲು ಬಲೆ ಬೀಸಿದ್ದಾರೆ.
ಕಳೆದ ವರ್ಷದ ಪಶುವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣದ ಆರೋಪಿಗಳನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದರು. ಇದೇ ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿರುವುದು ವಿಪರ್ಯಸ.