ನವದೆಹಲಿ:ಅಕ್ಟೋಬರ್ 21ರಂದು ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ನಾಯಕರು ಮಹತ್ವದ ಸಭೆ ನಡೆಸಲಿದ್ದಾರೆ. ಮೈತ್ರಿ ವಿಚಾರ ಸಭೆಯ ಮುಖ್ಯ ಅಜೆಂಡಾ ಎನ್ನಲಾಗಿದೆ.
ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಸೇರಿದಂತೆ ಹಿರಿಯ ನಾಯಕರು ಭಾಗಿಯಾಗಲಿದ್ದಾರೆ.
ಕಳೆದ ಶನಿವಾರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದರೂ ಬಿಜೆಪಿ-ಶಿವಸೇನೆ ಮೈತ್ರಿ ಬಗ್ಗೆ ಇನ್ನೂ ಸ್ಪಷ್ಟತೆ ದೊರೆತಿಲ್ಲ. ಹೀಗಾಗಿ ಇಂದಿನ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಅಕ್ಟೋಬರ್ 21ರಂದು ಮಹಾರಾಷ್ಟ್ರ ವಿಧಾನಸಭೆಯ 288 ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದ್ದು ಮತದಾನ ನಡೆಯಲಿದೆ.