ನವದೆಹಲಿ:ದೇಶದಲ್ಲಿ ಜಾರಿಗೊಳಿಸಲು ಮುಂದಾಗಿರುವ ಕೃಷಿ ಮಸೂದೆಗಳಿಗೆ ಅನೇಕ ರಾಜ್ಯಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಇದರ ಮಧ್ಯೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಕೇಂದ್ರ ಸರ್ಕಾರ ಹೊಸದಾಗಿ ಮೂರು ಕೃಷಿ ಮಸೂದೆ ಜಾರಿಗೆ ತರಲು ಮುಂದಾಗಿದ್ದು, ಇದೇ ವಿಚಾರಕ್ಕೆ ಸಂಬಂಧಿಸಿ ಈಗಾಗಲೇ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ರಾಜೀನಾಮೆ ನೀಡಿದ್ದಾರೆ. ಪಂಜಾಬ್, ಹರಿಯಾಣ, ಪಶ್ಚಿಮ ಬಂಗಾಳದಲ್ಲಿ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಇದೀಗ ಕೇಂದ್ರ ಕೆಲವೊಂದು ಬೆಲೆಗಳ ಬೆಂಬಲ ಬೆಲೆ ಹೆಚ್ಚಿಸಿ ಆದೇಶ ಹೊರಡಿಸಿದೆ.
ಪ್ರಮುಖವಾಗಿ ಗೋಧಿ, ಮಸೂರ, ಬಾರ್ಲಿ, ಸಾಸಿವೆ, ಕಾಬೂಲ್ ಕಡಲೆ ಸೇರಿ ಅನೇಕ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಿಸಲಾಗಿದೆ. ಸದ್ಯ ಗೋಧಿಯ ಬೆಂಬಲ ಬೆಲೆ 50 ರೂ. ಏರಿಕೆ ಮಾಡಲಾಗಿದ್ದು, ಕ್ವಿಂಟಲ್ಗೆ 1975 ರೂ. ಆಗಿದೆ. ಇದಕ್ಕೆ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.ಕೃಷಿ ಮಸೂದೆಗಳಿಗೆ ಇನ್ನಿಲ್ಲದ ಆಕ್ರೋಶ ಕೇಳಿ ಬರುತ್ತಿದ್ದು, ಇದರ ಮಧ್ಯೆ ಕೃಷಿ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಹಾಕಿದೆ.
ಮಸೂದೆಗಳಿಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಇದೇ ವಿಚಾರವಾಗಿ ಸರಣಿ ಟ್ವೀಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಕೃಷಿ ಬೆಳೆಗಳ ಕನಿಷ್ಟ ಬೆಂಬಲ ಬೆಲೆ ವ್ಯವಸ್ಥೆ, ಕೃಷಿ ಉತ್ಪನ್ನಗಳ ಖರೀದಿ ಪ್ರಕ್ರಿಯೆ ಮುಂದುವರಿಯಲಿದೆ ಎಂದಿದ್ದರು.
ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರೋತ್ಸಾಹ ಮತ್ತು ನೆರವು) ವಿಧೇಯಕ, 2020. ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಒಪ್ಪಂದ ವಿಧೇಯಕ 2020 ಅಂಗೀಕಾರ ಕೊಂಡ ನಂತರ ಪ್ರಧಾನಿ ಮೋದಿ ಈ ಸಂಬಂಧ ಸರಣಿ ಟ್ವೀಟ್ ಮಾಡಿದ್ದಾರೆ.