ನವದೆಹಲಿ: ಸಾಲ ಮರುಪಾವತಿ ಅವಧಿಯನ್ನು ಮತ್ತೆರಡು ವರ್ಷಗಳ ಕಾಲ ವಿಸ್ತರಿಸಬಹುದು ಎಂದು ಕೇಂದ್ರ ಸರ್ಕಾರ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದೆ.
2 ವರ್ಷದವರೆಗೆ ಸಾಲ ಮರುಪಾವತಿ ಅವಧಿ ವಿಸ್ತರಣೆ ಸಾಧ್ಯ: ಸುಪ್ರೀಂಗೆ ಕೇಂದ್ರದ ಮಾಹಿತಿ
ಸಾಲ ಮರುಪಾವತಿ ಅವಧಿ ಅಥವಾ ಕಂತುಗಳ ಮೇಲಿನ ಬಡ್ಡಿ ಪಾವತಿಸುವ ಅವಧಿಯನ್ನು ಎರಡು ವರ್ಷಗಳವರೆಗೆ ಮುಂದೂಡಿದರೆ ಕೋವಿಡ್ ಪರಿಸ್ಥಿತಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ನೆರವಾಗಲಿದೆ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ತಿಳಿಸಿದೆ.
ಕೋವಿಡ್ ಪರಿಸ್ಥಿತಿಯಿಂದಾಗಿ ಹಲವಾರು ಕ್ಷೇತ್ರಗಳು ಸಂಕಷ್ಟಕ್ಕೆ ಸಿಲುಕಿದ್ದು, ದೇಶದ ಆರ್ಥಿಕತೆ ಶೇ.-23 ರಷ್ಟು ಕುಸಿದಿದೆ. ಸಾಲ ಮರುಪಾವತಿ ಅವಧಿ ಅಥವಾ ಕಂತುಗಳ ಮೇಲಿನ ಬಡ್ಡಿ ಪಾವತಿಸುವ ಅವಧಿಯನ್ನು ಎರಡು ವರ್ಷಗಳವರೆಗೆ ಮುಂದೂಡಿದರೆ ಜನರಿಗೆ ನೆರವಾಗಲಿದೆ ಎಂದು ಕೇಂದ್ರ ಸರ್ಕಾರ ಹಾಗೂ ಆರ್‌ಬಿಐ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾ.ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠಕ್ಕೆ ತಿಳಿಸಿದ್ದಾರೆ.
ಲಾಕ್ಡೌನ್ ಅವಧಿಯಲ್ಲಿ ಮುಂದೂಡಲ್ಪಟ್ಟ ಇಎಂಐಗಳಿಗೆ ಬಡ್ಡಿ ವಿಧಿಸುವ ಕ್ರಮವನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಕೇಂದ್ರ ಸರ್ಕಾರ ಮತ್ತು ಆರ್‌ಬಿಐಗೆ ಸೂಚಿಸಿತ್ತು. ಈ ವಿಚಾರವಾಗಿ ಆರ್‌ಬಿಐ ಸಲ್ಲಿಸಿದ ಅರ್ಜಿಗಳನ್ನ ಬುಧವಾರ ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ಹೇಳಿದೆ.