ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಈ ಕುರಿತು ಎನ್ಸಿಪಿ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಪ್ರತಿಕ್ರಿಯಿಸಿದ್ದಾರೆ.
ಮಹಾರಾಷ್ಟ್ರ ಸರ್ಕಾರ ನ್ಯಾಯಾಲಯದ ಆದೇಶವನ್ನು ಗೌರವಿಸುತ್ತದೆ ಮತ್ತು ತನಿಖೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಸಹಕಾರ ನೀಡುತ್ತದೆ ಎಂದು ನನಗೆ ಖಾತ್ರಿಯಿದೆ ಎಂದು ಪವಾರ್ ಟ್ವೀಟ್ ಮಾಡಿದ್ದಾರೆ. 2014 ರಲ್ಲಿ ಸಿಬಿಐ ಡಾ. ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದ ತನಿಖೆ ಪ್ರಾರಂಭಿಸಿತ್ತು. ಆದ್ರೆ ಅದು ಇದುವರೆಗೆ ಪೂರ್ಣಗೊಂಡಿಲ್ಲ. ಈ ಪ್ರಕರಣ ಕೂಡ ಅದೇ ರೀತಿ ಆಗಲ್ಲ ಎಂಬ ಭರವಸೆ ನನಗಿದೆ ಎಂದು ಪವಾರ್ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಡಾ. ನರೇಂದ್ರ ದಾಭೋಲ್ಕರ್ ಅವರ ಮಗ ಡಾ. ಹಮೀದ್ ದಾಭೋಲ್ಕರ್ ಪ್ರತಿಕ್ರಿಯಿಸಿದ್ದು, ಸಿಬಿಐ ಇನ್ನೂ ಕೂಡ ಕೊಲೆ ಪ್ರಕರಣದ ತನಿಖೆ ನಡೆಸುತ್ತಿದೆ. ಇದುವರೆಗೆ ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆಯ ಮಾಸ್ಟರ್ ಮೈಂಡ್ ಪತ್ತೆಯಾಗಿಲ್ಲ. ಈ ಬಗ್ಗೆ ಬೇಸರವಿದೆ ಎಂದಿದ್ದಾರೆ.
ಅಂಧಶ್ರದ್ಧ ನಿರ್ಮೂಲನ್ ಸಮಿತಿಯ ಮುಖ್ಯಸ್ಥರಾಗಿದ್ದ ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರನ್ನು 2013 ಆಗಸ್ಟ್ 20 ರಂದು ಹತ್ಯೆ ಮಾಡಲಾಗಿತ್ತು. ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ಇದರ ಜೊತೆ ವಿಚಾರವಾದಿಗಳಾದ ಗೋವಿಂದ್ ಪನ್ಸಾರೆ, ಕರ್ನಾಟಕದ ಎಂ ಎಂ ಕಲ್ಬುರ್ಗಿ ಮತ್ತು ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ಕೂಡ ಇನ್ನೂ ಪೂರ್ಣಗೊಂಡಿಲ್ಲ.