ನವದೆಹಲಿ: ತಂತ್ರಜ್ಞಾನ ಅಭಿವೃದ್ಧಿ ಸಾಮರ್ಥ್ಯಗಳನ್ನು ವಿಸ್ತರಿಸಲು ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಹೂಡಿಕೆಯನ್ನು ಹೆಚ್ಚಿಸಬೇಕಿದೆ ಎಂದು ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ಅಧ್ಯಕ್ಷ ಪಿ.ಡಿ.ವಘೇಲಾ ಅಭಿಪ್ರಾಯಪಟ್ಟಿದ್ದಾರೆ.
15ನೇ ಭಾರತ ಡಿಜಿಟಲ್ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಭಾರತವನ್ನು ಆತ್ಮನಿರ್ಭರವಾಗಿಸಲು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ವಿವರಿಸಿದರು.
ಸದ್ಯದ ಪರಿಸ್ಥಿತಿಯಲ್ಲಿ ನಾವು ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ (ಆರ್ & ಡಿ) ಹೂಡಿಕೆಯನ್ನು ಹೆಚ್ಚಿಸಬೇಕಾಗಿರುವುದು ಬಹಳ ಮುಖ್ಯ. ಆರ್ಥಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಲು ತಂತ್ರಜ್ಞಾನದಲ್ಲಿ ನಾವು ಸ್ವಾವಲಂಬಿಗಳಾಗಬೇಕು. ಕೇವಲ ಗ್ರಾಹಕರಾಗಿರದೆ, ನಾವು ಉತ್ಪಾದಕರಾಗಿ ರೂಪುಗೊಳ್ಳಬೇಕು. ಆಗ ಮಾತ್ರ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಾಧ್ಯ. ತಂತ್ರಜ್ಞಾನ ಅಭಿವೃದ್ಧಿಗೆ ಕೂಲಂಕಷ ಪರಿಶೀಲನೆ ಅಗತ್ಯ, ಅದಕ್ಕಾಗಿ ಅಕಾಡೆಮಿಗಳನ್ನು ಸ್ಥಾಪಿಸುವ ಅಗತ್ಯವಿದೆ ಎಂದರು.