ನವದೆಹಲಿ: ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ಗರ್ಭಿಣಿ ಮತ್ತು ಬಾಣಂತಿಯರಿಗೆ ಹಾಜರಾತಿ ಮಾನದಂಡಗಳನ್ನು ಸಡಿಲಿಸಲು ಮಾರ್ಗಸೂಚಿಗಳನ್ನು ರೂಪಿಸುವಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ತಮ್ಮ ಅಭಿಪ್ರಾಯ ತಿಳಿಸುವಂತೆ ಕೇಂದ್ರ ಸರ್ಕಾರ ಮತ್ತು ವಿಶ್ವವಿದ್ಯಾಲಯ ಧನಸಹಾಯ ಆಯೋಗಕ್ಕೆ (ಯುಜಿಸಿ) ಆದೇಶಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ.ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಸಿ. ಹರಿಶಂಕರ್ ಅವರಿದ್ದ ನ್ಯಾಯಪೀಠ, ಕೇಂದ್ರ ಸರ್ಕಾರ ಹಾಗೂ ಯುಜಿಸಿ ಜೊತೆಗೆ ಮಾನವ ಸಂಪನ್ಮೂಲ ಅಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯಗಳಿಗೆ ನೋಟಿಸ್ ಜಾರಿಗೊಳಿಸಿದ್ದು, ಪಿಐಎಲ್ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುವಂತೆ ಕೋರಿದೆ.
ಇದರ ಜೊತೆಗೆ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ), ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ (ಎಂಸಿಐ) ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಗೂ (ಎಐಸಿಟಿಇ) ನೋಟಿಸ್ ಜಾರಿಗೊಳಿಸಿದೆ. ಮುಂದಿನ ವಿಚಾರಣೆಗೂ ಮೊದಲೇ ಅಂದರೆ, ಮೇ 28ಕ್ಕೂ ಮುನ್ನ ತಮ್ಮ ನಿಲುವು ಸ್ಪಷ್ಟಪಡಿಸುವಂತೆ ಆದೇಶಿಸಿದೆ.