ಕೋಯಿಕ್ಕೋಡ್ (ಕೇರಳ): ದುಬೈನಿಂದ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಕರಿಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗ್ತಿದ್ದ ವೇಳೆ ರನ್ವೇಗೆ ಅಪ್ಪಳಿಸಿ ಭಾರಿ ಅವಘಡ ಸಂಭವಿಸಿರುವ ಹಿನ್ನೆಲೆ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
ಈ ದುರಂತ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಕೇರಳ ಸಿಎಂ ಪಿಣರಾಯಿ ವಿಜಯನ್ ಜೊತೆ ದೂರವಾಣಿ ಮೂಲಕ ಸ್ಥಳದಲ್ಲಿನ ಪರಿಸ್ಥಿತಿ ಕುರಿತಂತೆ ಮಾಹಿತಿ ಪಡೆದುಕೊಂಡಿದ್ದಾರೆ. ಕೋಯಿಕ್ಕೋಡ್ ಮತ್ತು ಮಲಪ್ಪುರಂ ಜಿಲ್ಲಾಧಿಕಾರಿಗಳು ಮತ್ತು ಐಜಿ ಅಶೋಕ್ ಯಾದವ್ ಸೇರಿದಂತೆ ಅಧಿಕಾರಿಗಳ ತಂಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿವೆ ಎಂದು ಸಿಎಂ ಪಿಣರಾಯಿ ವಿಜಯನ್ ಪ್ರಧಾನಿಗೆ ತಿಳಿಸಿದ್ದಾರೆ.
ಈ ನಡುವೆ ಟ್ವಿಟ್ ಮಾಡಿರುವ ಗೃಹ ಸಚಿವ ಅಮಿತ್ ಶಾ, ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ದುರಂತ ತಿಳಿದು ಆಘಾತವಾಗಿದೆ. ನಾನು ಈಗಾಗಲೇ ಎನ್ಡಿಆರ್ಎಫ್ ತಂಡಕ್ಕೆ ತಕ್ಷಣ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ಇನ್ನು, ಘಟನೆ ಕುರಿತಂತೆ ವಿದೇಶಾಂಗ ಸಚಿವ ಜೈಶಂಕರ್ ಟ್ವೀಟ್ ಮಾಡಿದ್ದು, ಏರ್ ಇಂಡಿಯಾ ವಿಮಾನ ದುರಂತದ ಬಗ್ಗೆ ಕೇಳಿ ತೀವ್ರ ಸಂಕಟವಾಗಿದೆ. ಗಾಯಗೊಂಡವರಿಗೆ ಹಾಗೂ ಅವರ ಕುಟುಂಬಗಳ ಪರ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ದುಬೈನಿಂದ ಕೇರಳಕ್ಕೆ ಆಗಮಿಸಿದ್ದ ಏರ್ ಇಂಡಿಯಾ ವಿಮಾನ ಭಾರಿ ಮಳೆಯಾಗುತ್ತಿದ್ದ ವೇಳೆ ಲ್ಯಾಂಡ್ ಆಗುತ್ತಿದ್ದಾಗ ಈ ಘಟನೆ ನಡೆದಿದೆ. ವಿಮಾನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಭರದ ರಕ್ಷಣಾ ಕಾರ್ಯಚರಣೆ ಆರಂಭಗೊಂಡಿದೆ.