ಹೈದ್ರಾಬಾದ್:ಇಲ್ಲಿನ 26 ವರ್ಷದ ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಆಕೆಯ ದೇಹಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದ ಘಟನೆ ವಿರೋಧಿಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ತೆಲಂಗಾಣದಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಕಾವು ಜೋರಾಗಿದೆ.
ಒಂದೆಡೆ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಜನರು ಹೈದರಾಬಾದ್-ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ತೆಲಂಗಾಣದ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಂಗಾರೆಡ್ಡಿ ಜಿಲ್ಲೆಯಲ್ಲಿ ಬಾಯಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು 'ದೀಕ್ಷಾ' ಎಂಬ ಹೆಸರಲ್ಲಿ ಮೌನ ಪ್ರತಿಭಟನೆ ನಡೆಸಲಾಯಿತು. ತೆಲಂಗಾಣದಲ್ಲಿ ಮಹಿಳೆಯರು ಶೇ. 1ರಷ್ಟು ಕೂಡ ಸುರಕ್ಷಿತವಾಗಿಲ್ಲ. ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಸರ್ಕಾರ ಕಾಳಜಿ ವಹಿಸುತ್ತಿಲ್ಲ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅಕುಲ ವಿಜಯ ಆರೋಪಿಸಿದ್ದಾರೆ.