ಸಂಭಾಲ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಸಮಾಜವಾದಿ ಪಕ್ಷದ ನಾಯಕ ಚೋಟೆಲಾಲ್ ದಿವಾಕರ್ ಮತ್ತು ಅವರ ಪುತ್ರ ಸುನಿಲ್ ದಿವಾಕರ್ ಎಂಬುವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ.
ಸಮಾಜವಾದಿ ಪಕ್ಷದ ನಾಯಕ ಮತ್ತು ಮಗನ ಹತ್ಯೆ ನರೇಗಾ ಯೋಜನೆ ಅಡಿಯಲ್ಲಿ ರಸ್ತೆ ನಿರ್ಮಣದ ಕುರಿತ ವಿವಾದದಿಂದಾಗಿ ಇಬ್ಬರನ್ನು ಹತ್ಯೆಮಾಡಲಾಗಿದೆ ಎಂದು ತಿಳಿದುಬಂದಿದೆ. ಚೋಟೆಲಾಲ್ ದಿವಾಕರ್ ಅವರು 2017ರ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿದ್ದರು.
ದಿವಾಕರ್ ಮತ್ತು ಅವರ ಮಗ ಜಮೀನಿಗೆ ಹೋಗುವಾಗ ಬೈಕ್ನಲ್ಲಿ ಬಂದ ವ್ಯಕ್ತಿಗಳು ಇಬ್ಬರ ಜೊತೆ ವಾಗ್ವಾದ ನಡೆಸಿದ್ದಾರೆ. ಕೆಲ ಹೊತ್ತಿನ ಬಳಿಕ ಇಬ್ಬರ ಮೇಲೆ ಗುಂಡು ಹಾರಿಸಿ ಬೈಕನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ಅವರ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಹತ್ಯೆಯ ಸುದ್ದಿ ಹರಡಿದ ಕೂಡಲೇ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜವಾದಿ ಪಕ್ಷದ ಕಾರ್ಯಕರ್ತರು ಗ್ರಾಮಕ್ಕೆ ತೆರಳಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.